- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಂಪುಟ ವಿಸ್ತರಣೆ : ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನೂತನ ಹತ್ತು ಮಂದಿ ಶಾಸಕರು

Raj-Bhawan [1]

ಬೆಂಗಳೂರು : ಉಪಚುನಾವಣೆಯಲ್ಲಿ ಗೆದ್ದ ಹತ್ತು ಮಂದಿ ಶಾಸಕರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲ ನೂತನ ಸಚಿವರಿಗೆ ಪ್ರಮಾಣ ವಚನ ಭೋಧಿಸಿದರು.

ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್‌ ಸಿಂಗ್‌, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ, ಚಿಕ್ಕಬಳ್ಳಾಪುರ ಶಾಸಕ ಡಾ| ಕೆ. ಸುಧಾಕರ್‌, ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಅವರು ಬಿಎಸ್ ವೈ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ.

ಉಪಚುನಾವಣೆಯಲ್ಲಿ ಗೆದ್ದವರ ಪೈಕಿ 10 ಮತ್ತು ಮೂಲ ಬಿಜೆಪಿಯ ಮೂವರು ಸೇರಿದಂತೆ 13 ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಚಿಂತಿಸಿದ್ದರು. ಆದರೆ ಸಿ.ಪಿ. ಯೋಗೇಶ್ವರ್‌ಗೆ ಸಚಿವ ಸ್ಥಾನ ನೀಡುವುದಕ್ಕೆ ಮೂಲ ಬಿಜೆಪಿಗರಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ವರಿಷ್ಠರು, ಸದ್ಯಕ್ಕೆ ಉಪ ಚುನಾವಣೆಯಲ್ಲಿ ಗೆದ್ದವರಿಗಷ್ಟೇ ಸಚಿವ ಸ್ಥಾನ ನೀಡುವಂತೆ ಸೂಚನೆ ನೀಡಿದ್ದಾರೆ. ಹಾಗಾಗಿ ಎರಡನೇ ಸಂಪುಟ ವಿಸ್ತರಣೆಯಲ್ಲಿ ಮೂಲ ಬಿಜೆಪಿಗರಾರಿಗೂ ಸಚಿವ ಸ್ಥಾನ ಸಿಗದಂತಾಗಿದೆ.