ಮಡಿಕೇರಿ : ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದು ತಿಳಿಸಿದೆ. ಕೇಂದ್ರ ಸರ್ಕಾರ ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸದೆ ಇರುವುದರಿಂದಲೇ ಈ ರೀತಿಯ ತೀರ್ಪು ಹೊರ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಆರೋಪಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರ್ಕಾರದ ವೈಫಲ್ಯದ ವಿರುದ್ಧ ಫೆ16 ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ, ಯುವ ಸಮೂಹ, ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಮೀಸಲಾತಿಯಿಂದ ವಂಚಿತರಾಗುವ ಸಾಧ್ಯತೆಗಳಿದೆ ಎಂದು ಮಂಜುನಾಥ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.
ನಗರ ಪ್ರದೇಶದ ಮಂದಿಗೆ ಮಾತ್ರ ಲಾಭವಾಗುವ ಅಂಶಗಳಿದ್ದು, ಗ್ರಾಮೀಣರು ಮೀಸಲಾತಿ ಇಲ್ಲದೆ ಸಂಕಷ್ಟಕ್ಕೆ ಸಿಲುಕುವ ಅಪಾಯವಿದೆ. ಆದ್ದರಿಂದ ಮೀಸಲಾತಿ ಪ್ರತಿಪಾದನೆ ಕುರಿತು ಕೇಂದ್ರ ಸರ್ಕಾರ ಮತ್ತೆ ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿ ಜನಪರ ತೀರ್ಪನ್ನು ಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ.
ಭಾನುವಾರ ಬೆಳಗ್ಗೆ 11 ಗಂಟೆಗೆ ಪಕ್ಷದ ವತಿಯಿಂದ ನಡೆಯುವ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಯುವ ಸಮೂಹ ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಮಂಜುನಾಥ್ ಕುಮಾರ್ ಮನವಿ ಮಾಡಿದ್ದಾರೆ.
Click this button or press Ctrl+G to toggle between Kannada and English