ನವದೆಹಲಿ : ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ದೇಶದೆಲ್ಲೆಡೆ ವಿರೋಧ ವ್ಯಕ್ತವಾಗುತ್ತಿದೆ. ತೆಲಂಗಾಣ ಸರ್ಕಾರವು ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ನಿರ್ಧರಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ರಾವ್ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಪೌರತ್ವ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸುವುದಾಗಿ ಸಿಎಂ ಚಂದ್ರಶೇಖರ್ ರಾವ್ ಕಳೆದ ತಿಂಗಳು ಹೇಳಿದ್ದರು. ಕೇರಳ, ಪಂಜಾಬ್, ರಾಜಸ್ಥಾನ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪಾಂಡಿಚೇರಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಿವೆ.
ಭಾರತೀಯ ಪೌರತ್ವಕ್ಕೆ ಸಂಬಂಧಿಸಿದಂತೆ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಬೇಡಿ ಎಂದು ತೆಲಂಗಾಣ ಸಚಿವ ಸಂಪುಟ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಸಭೆ ಬಳಿಕ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ.
“ಕಾನೂನಿನ ಮುಂದೆ ಎಲ್ಲಾ ಧರ್ಮಗಳನ್ನು ಸಮಾನವಾಗಿ ಪರಿಗಣಿಸಬೇಕು” ಎಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಪೌರತ್ವ ನೀಡುವಾಗ ಧರ್ಮದ ಆಧಾರದ ಮೇಲೆ ತಾರತಮ್ಯಕ್ಕೆ ಕಾರಣವಾಗುವ ಮತ್ತು ಸಂವಿಧಾನದ ಮೂಲ ಆಶಯವಾದ ಜಾತ್ಯಾತೀತತೆಗೆ ಧಕ್ಕೆ ತರುವಂತಹ ಸಿಎಎ ಕಾಯ್ದೆ-2019ನ್ನು ರದ್ದುಗೊಳಿಸುವ ಕ್ರಮಗಳನ್ನು ಕೈಕೊಳ್ಳುವಂತೆ ತೆಲಂಗಾಣ ಕ್ಯಾಬಿನೆಟ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಒಟ್ಟಾರೆ ತೆಲಂಗಾಣ ಸರ್ಕಾರವು ವಿಧಾನಸಭೆ ಅಧಿವೇಶನದಲ್ಲಿ ಕೇರಳ, ಪಂಜಾಬ್, ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದ ರೀತಿಯಲ್ಲೇ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಅಂಗೀಕರಿಸಲು ನಿರ್ಧರಿಸಿದೆ.
ಪೌರತ್ವ ಮಸೂದೆ ಕಾಯ್ದೆ ಜಾರಿ ವಿರೋಧಿಸಿ ದೇಶಾದ್ಯಂತ ತೀವ್ರತರವಾದ ಪ್ರತಿಭಟನೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಸಿಎಎ ಪ್ರತಿಭಟನೆಗಳನ್ನು ಎದುರಿಸುತ್ತಿದೆ.
Click this button or press Ctrl+G to toggle between Kannada and English