ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

11:41 AM, Monday, March 2nd, 2020
Share
1 Star2 Stars3 Stars4 Stars5 Stars
(No Ratings Yet)
Loading...

siddaramaiah

ಬೆಂಗಳೂರು : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷದ ವಿರುದ್ಧ ಹರಿಹಾಯಲು ವಿರೋಧ ಪಕ್ಷಗಳು ಸಿದ್ಧವಾಗಿವೆ. ಇಂದು ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರ ಭಾಷಣದ ಮೂಲಕ ಚರ್ಚೆ ಆರಂಭವಾಗಲಿದೆ. ಎರಡು ದಿನಗಳ ಚರ್ಚೆಯ ಬಳಿಕ ಮಾರ್ಚ್ 5ರಂದು ಬಜೆಟ್ ಮಂಡನೆಯಾಗಲಿದೆ. ಅಧಿವೇಶನದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (ಸಿಎಲ್ಪಿ) ಕರೆದಿದ್ದಾರೆ.

ಅಧಿವೇಶನದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕರ್ನಾಟಕಕ್ಕೆ ನಿಧಿ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿವಾದಾತ್ಮಕ ಹೇಳಿಕೆ, ರಾಷ್ಟ್ರವ್ಯಾಪಿ ಸಿಎಎ ವಿರುದ್ಧದ ಹಿಂಸಾತ್ಮಕ ಪ್ರತಿಭಟನೆ, ಮಂಗಳೂರು ಗೋಲಿಬಾರ್ ಪ್ರಕರಣವನ್ನು ಮುಖ್ಯ ಅಸ್ತ್ರವಾಗಿಟ್ಟುಕೊಂಡು ಅಧಿವೇಶನದಲ್ಲಿ ಪ್ರಸ್ತಾಪಿಸಲು ಯೋಚಿಸಿವೆ.

ಇದರ ಜೊತೆಗೆ, ಪ್ರವಾಹ ಪರಿಹಾರ, ರೈತರ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ದರ ಹೆಚ್ಚಳದಂತಹ ಅನೇಕ ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ಮೇಲೆ ದಾಳಿ ನಡೆಸಲು ವಿಪಕ್ಷಗಳು ಸಜ್ಜಾಗಿವೆ. ರೈತರ ಸಾಲಮನ್ನಾ ಬಗ್ಗೆ ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವುದರ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ 2 ದಿನಗಳ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು. ಹೀಗಾಗಿ, ಈ ಬಜೆಟ್ ಅಧಿವೇಶನದಲ್ಲಿ ಈ ಎಲ್ಲ ವಿಚಾರಗಳು ಪ್ರತಿಧ್ವನಿಸಲಿವೆ.

ಎಚ್.ಎಸ್. ದೊರೆಸ್ವಾಮಿ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಕುರಿತಾಗಿ ಸದನದಲ್ಲಿ ಹೋರಾಟ ನಡೆಸುವ ಬಗ್ಗೆ ಸಿಎಲ್ಪಿ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆಯಿದೆ. ಶಾಸಕ ಯತ್ನಾಳ್ ತಮ್ಮ ಹೇಳಿಕೆಗೆ ಬಹಿರಂಗ ಕ್ಷಮೆ ಯಾಚಿಸುವಂತೆ ಕಾಂಗ್ರೆಸ್ ನಾಯಕರು ಇಂದು ಪಟ್ಟು ಹಿಡಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭಕ್ಕೂ ಮುನ್ನ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರ ಸಭೆ ಕರೆದಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English