ಮಧ್ಯಪ್ರದೇಶ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನದ ಭೀತಿಯಲ್ಲಿ

10:08 PM, Monday, March 9th, 2020
Share
1 Star2 Stars3 Stars4 Stars5 Stars
(No Ratings Yet)
Loading...

Kamalanathಬೆಂಗಳೂರು: ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗುವ ಸಾಧ್ಯತೆ ಇದೆ.

ಹಿರಿಯ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ 6 ಸಚಿವರು ಸೇರಿದಂತೆ 17 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಿದ್ದಾರೆ.

6 ಸಚಿವರು, 11 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದು, ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಂಗಳೂರಿಗೆ ಬಂದ ಕೈ ನಾಯಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಎಲ್ಲ ನಾಯಕರ ಫೋನ್ ಸ್ವಿಚ್ ಆಫ್ ಆಗಿದೆ.

ಮಧ್ಯಪ್ರದೇಶದಲ್ಲಿ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಶಾಸಕರ ಮಧ್ಯೆ 2 ಬಣಗಳಿದ್ದು 23 ನಾಯಕರು ಸಿಎಂ ಹುದ್ದೆಗೆ ಜ್ಯೋತಿರಾದಿತ್ಯ ಸಿಂಧಿಯಾ ಪರ ಬ್ಯಾಟಿಂಗ್ ಮಾಡಿದ್ದರು. ಈ ಶಾಸಕರ ಪೈಕಿ ಹಲವು ಶಾಸಕರು ಈಗ ಬೆಂಗಳೂರಿಗೆ ಆಗಮಿಸಿದ್ದಾರೆ.

ಸದ್ಯದ ರಾಜಕೀಯ ಪರಿಸ್ಥಿತಿ ಕುರಿತು ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚಿಸಲು ದೆಹಲಿ ತೆರಳಿದ್ದ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ತಮ್ಮ ದೆಹಲಿ ಪ್ರವಾಸವನ್ನು ಮೊಟಕುಗೊಳಿಸಿ, ಭೋಪಾಲ್ ಗೆ ಆಗಮಿಸಿದ್ದು, ಸರ್ಕಾರ ಉಳಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಮಲ್ ನಾಥ್ ಸರ್ಕಾರ ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಆದರೆ ಬಿಜೆಪಿ ಈ ಆರೋಪವನ್ನು ನಿರಾಕರಿಸಿದ್ದು, ನಮಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದೆ. ಕಳೆದ ಒಂದು ವಾರದಿಂದ ಮಧ್ಯಪ್ರದೇಶದ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ನಡೆಯುತ್ತಿದ್ದು, ಸರ್ಕಾರ ಉಳಿಸಿಕೊಳ್ಳಲು ಕಮಲ್‍ನಾಥ್ ಭಾರೀ ಕಸರತ್ತು ನಡೆಸುತ್ತಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English