- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆಯುಷ್ಮಾನ್ ಭಾರತ್ ಕಾರ್ಡ್‍ನಲ್ಲಿ ಕೋವಿಡ್ ಚಿಕಿತ್ಸೆ ಸೇರ್ಪಡೆ

SidhuBRoopesh [1]ಮಂಗಳೂರು :-ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದಾಗಿದೆ. ಕಾರ್ಡನ್ನು ಮಾಡಿಸುವ ಸಂದರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ.

ಬಿ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ ರೂ. 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಎ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ.30% ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ. 1.50 ಲಕ್ಷ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಸಹ ಚಿಕಿತ್ಸೆ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ, ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿನ ಆರೋಗ್ಯ ಮಿತ್ರರು, ಆರೋಗ್ಯ ಸಹಾಯವಾಣಿ 104 ಸಂಪರ್ಕಿಸಬಹುದು ಎಂದು ದ.ಕ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.