ಮಂಗಳೂರು : ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರು ಜು.31ರ ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೆಪಿಸಿಸಿ ಅಧ್ಯಕ್ಷರನ್ನು, ಮಾಜಿ ಸಚಿವ ಯು.ಟಿ ಖಾದರ್, ಮಾಜಿ ಶಾಸಕ ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಹರೀಶ್, ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರು ಬರಮಾಡಿಕೊಂಡರು .
ಆ ಬಳಿಕ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇದಾದ ಬಳಿಕ ಬಿಷಪ್ ಹೌಸ್ ನಲ್ಲಿ ಬಿಷಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.
ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಆನಂತರ ಕೋವಿಡ್ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಪಕ್ಷದ 60 ಮಂದಿ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿ , ಮಧ್ಯಾಹ್ನ ಬಳಿಕ ಖಾಝಿ ಬೇಕಲ್ ಉಸ್ತಾದ್ ಅವರ ಮುಡಿಪುವಿನಲ್ಲಿರುವ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದು, ಅಲ್ಲಿಂದ ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿಯ ಬಂಟ್ವಾಳದ ಮನೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಲಿದ್ದಾರೆ.
ಆನಂತರ ಧರ್ಮಸ್ಥಳಕ್ಕೆ ತೆರಳಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣ ಮೂಲಕ ಬೆಂಗಳೂರಿಗೆ ಮರಳಲಿದ್ದಾರೆ.
Click this button or press Ctrl+G to toggle between Kannada and English