ಬೆಂಗಳೂರು : ಕರ್ನಾಟಕ ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಖುದ್ದು ಸಿಎಂ ಯಡಿಯೂರಪ್ಪ ಈ ಬಗ್ಗೆ ಟ್ವೀಟ್ ಮಾಡಿದ್ದು, ತಮಗೂ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
“ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಆರೋಗ್ಯವಾಗಿದ್ದೇನೆ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ, ನನ್ನೊಂದಿಗೆ ಇತ್ತೀಚಿನ ದಿನಗಳಲ್ಲಿ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಪಟ್ಟು ಆರೋಗ್ಯದ ಮೇಲೆ ನಿಗಾ ವಹಿಸಬೇಕು” ಎಂದು ಸಿಎಂ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.
— B.S. Yediyurappa (@BSYBJP) August 2, 2020
ಮುಖ್ಯಮಂತ್ರಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ವರದಿ ತಿಳಿಯುತ್ತಿದ್ದಂತೆಯೇ ಹಲವು ಗಣ್ಯರು ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಸರ್ಕಾರದ ಹಲವು ಸಚಿವರು, ಹಾಗೂ ಶಾಸಕರು, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಆಡಳಿತ ಹಾಗೂ ಪ್ರತಿಪಕ್ಷದ ನಾಯಕರು ಶೀಘ್ರ ಗುಣಮುಖರಾಗಲಿ ಎಂದು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಹಾರೈಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಕೊರೋನಾ ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿಯೊಬ್ಬರಲ್ಲೂ ಕೊರೋನಾ ಪಾಸಿಟಿವ್ ಬಂದಿದೆ ಎಂದು ಮೂಲಗಳಿಂದ ಸೋಮವಾರ ತಿಳಿದುಬಂದಿದೆ.
ನಿನ್ನೆಯಷ್ಟೇ ಯಡಿಯೂರಪ್ಪ ಅವರಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ಇದೀಗ ಅವರ ಪುತ್ರಿಯಲ್ಲೂ ಕೊರೋನಾ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇವರನ್ನೂ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
Click this button or press Ctrl+G to toggle between Kannada and English