ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಕೃಷಿ ಪ್ರಶಸ್ತಿ ಬಹುಮಾನಗಳನ್ನು ನೀಡಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿರುತ್ತದೆ.
ಈ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆ ನಡೆಸಿ ಪ್ರತಿ ಬೆಳೆಗೂ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರಿನಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಗೆ ಭತ್ತ ಬೆಳೆಯನ್ನು ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ.
ಅರ್ಹತೆ:- ಅರ್ಜಿದಾರರು ಸ್ವತ: ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕನಾಗಿರಬೇಕು. ಅರ್ಜಿಯೊಂದಿಗೆ ಪಹಣಿ ಪತ್ರಿಕೆ, ಶುಲ್ಕ ಪಾವತಿಸಿದ್ದಕ್ಕೆ ಚಲನ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣಪತ್ರ, ರೈತರ ಛಾಯಾಚಿತ್ರ-ಸಾಮಾನ್ಯ ವರ್ಗದ ರೈತರು ರೂ. 100/- ಪಾವತಿಸಬೇಕು. ಅರ್ಜಿ ಸಲ್ಲಿಸಲು ಸಪ್ಟೆಂಬರ್ 15 ಕೊನೆಯ ದಿನವಾಗಿರುತ್ತದೆ.
ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸುತ್ತಿರುವವರು ಬೆಳೆ ಪದ್ಧತಿ, ಸಮಗ್ರ ಕೃಷಿ ಪದ್ಧತಿ ಬೆಳೆ ಪದ್ಧತಿಗಳು ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣಗಳ ಅಭಿವೃದ್ಧಿ, ನೀರಿನ ಸಮರ್ಥ ಬಳಕೆ ಇನ್ನಿತರೆ ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಕುರಿತ ವಿಭಾಗಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಂಬಂಧಿತ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳು/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಂಗಳೂರು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Click this button or press Ctrl+G to toggle between Kannada and English