ಮಡಿಕೇರಿ : ಅಕ್ಟೋಬರ್ 17ರಂದು ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಜರುಗಲಿರುವ ಕಾವೇರಿ ಪವಿತ್ರ ತೀರ್ಥೋದ್ಭವ ವೀಕ್ಷಿಸಲು ಹೊರಜಿಲ್ಲೆ ಮತ್ತು ಹೊರರಾಜ್ಯದಿಂದ ಬರುವ ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿದ್ದು, ನೆಗೆಟಿವ್ ವರದಿಯಿದ್ದರೆ ಮಾತ್ರ ಕ್ಷೇತ್ರದೊಳಕ್ಕೆ ಪ್ರವೇಶಕ್ಕೆ ಅನುಮತಿ ನೀಡಲು ತೀರ್ಮಾನಿಸಲಾಗಿದೆ.
ಅಕ್ಟೋಬರ್ 17ರಂದು ಬೆಳಗ್ಗೆ 7.03ಕ್ಕೆ ಕನ್ಯಾ ಲಗ್ನ ಮೂಹೂರ್ತದಲ್ಲಿ ಕಾವೇರಿ ತೀರ್ಥೋದ್ಭವ ಜರುಗಲಿದೆ.
ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಮಾತ್ರವೇ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಅವರು ಮಾತನಾಡಿದರು.
ಹಿಂದಿನ ವರ್ಷಗಳಿಗಿಂತ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ ಈ ನಿಟ್ಟಿನಲ್ಲಿ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಹೊರಜಿಲ್ಲೆ ಮತ್ತು ಹೊರರಾಜ್ಯದಿಂದ ಬರುವ ಭಕ್ತಾದಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಶಾಸಕ ಕೆ.ಜಿ. ಬೋಪಯ್ಯ ತಿಳಿಸಿದ್ದಾರೆ.
ಜನದಟ್ಟಣೆಗೆ ಅವಕಾಶವಿಲ್ಲದಂತೆ ತೀರ್ಥೋದ್ಭವಕ್ಕೆ ಅವಕಾಶ ನೀಡಲಾಗುತ್ತದೆ ಎಂದರು.
ಪೂಜಾ ವಿಧಿವಿಧಾನಗಳು, ಕಾವೇರಿ ಕ್ಷೇತ್ರದ ಸಂಪ್ರದಾಯಗಳಿಗೆ ಕಿಂಚಿತ್ತೂ ಚ್ಯುತಿಬಾರದಂತೆ ತೀರ್ಥೋದ್ಭವ ಸಂದಭ೯ ಎಲ್ಲಾ ರೀತಿಯ ವ್ಯವಸ್ಥೆ ಕೈಗೊಳ್ಳಲಾಗುತ್ತದೆ.
ಕೋವಿಡ್ ಹಿನ್ನೆಲೆಯಲ್ಲಿ ಭಕ್ತಾಧಿಗಳ ಆರೋಗ್ಯ ಹಿತರಕ್ಷಣೆಗೂ ಆದ್ಯತೆ ನೀಡಲಾಗುತ್ತದೆ ಎಂದರು.
ಕಾವೇರಿ ಕ್ಷೇತ್ರಕ್ಕೆ ಬಂದವರಿಂದ ಕೋರೋನಾ ಸೋಂಕು ವ್ಯಾಪಿಸದಂತೆ , ಯಾವುದೇ ಸಮಸ್ಯೆಗೆ ಕಾರಣವಾಗದಂತೆ ಕ್ಷೇತ್ರದಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸಕಾ೯ರ ಈ ಬಾರಿ ಜಿಲ್ಲಾಡಳಿತ ಹಾಗೂ ದೇವಾಲಯ ಸಮಿತಿ ವತಿಯಿಂದ ಕೈಗೊಳ್ಳಲಿದೆ. ಜನರು ಕೂಡ ಸಹಕಾರ ನೀಡಬೇಕು ಎಂದು ಕೆ.ಜಿ.ಬೋಪಯ್ಯ ಮನವಿ ಮಾಡಿದ್ದಾರೆ.
ಎಂದಿನಂತೆ ಸಾಮಾನ್ಯ ಮಾರ್ಗದ ಬಸ್ ಗಳು ಸಂಚರಿಸಲಿವೆ. ಬಸ್ ನಲ್ಲಿ ಮಿತಿಗಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಳ್ಳದಂತೆ ಚಾಲಕರು ಮತ್ತು ನಿರ್ವಾಹಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿ ಅವರು ಮಡಿಕೇರಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಉಪವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ, ಮಡಿಕೇರಿ ತಹಶೀಲ್ದಾರ್ ಮಹೇಶ್, ಲೋಕೋಪಯೋಗಿ ಇಲಾಖೆಯ ಇಇ ಮದನ್ ಮೋಹನ್, ಎಇಇ ಶಿವರಾಂ, ಚೆಸ್ಕಾಂ ಇಇ ಸೋಮಶೇಖರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ದಿವಾಕರ್, ಮೇದಪ್ಪ, ಅನೂಪ್ ಮಾದಪ್ಪ, ಮಡಿಕೇರಿ ಕೆ.ಎಸ್.ಆರ್.ಟಿ.ಸಿ ಘಟಕ ವ್ಯವಸ್ಥಾಪಕರಾದ ಗೀತಾ, ಭಗಂಡೇಶ್ವರ ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಭಾಗಮಂಡಲ ಪಿಡಿಒ ಅನಿತಾ, ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ದೇವಾಲಯ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎಸ್.ಎಂ ಕಾವೇರಪ್ಪ, ಉದಿಯಂಡ ಸುಭಾಷ್ ಇತರರು ಹಾಜರಿದ್ದರು.
Click this button or press Ctrl+G to toggle between Kannada and English