ಮಂಗಳೂರು : ವಿವಿಧ ಜ್ಞಾನ ಕ್ಷೇತ್ರ ಗಳ ನಡುವೆ ಪರಸ್ಪರ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲಾಗಿದೆ. ವಿಜ್ಞಾನ ತಂತ್ರಜ್ಞಾನ ಸೇರಿದಂತೆ ವಿವಿಧ ಶೈಕ್ಷಣಿಕ ಕ್ಷೇತ್ರಗಳ ನಡುವೆ ಪರಸ್ಪರ ಸಮನ್ವಯ ಸಾಧಿಸಲು ಸಮಗ್ರ ವ್ಯವಸ್ಥೆಯಲ್ಲಿ ಸುಧಾರಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿ ಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿ ಮುಂದಿನ ಹಂತದಲ್ಲಿ ಮಗುವಿಗೆ ಮೂರು ವರ್ಷ ತುಂಬುವ ಹಂತದಿಂದಲೇ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದರು.
ಗ್ರಾಮ ಸ್ವರಾಜ್ಯ ಸಮಾವೇಶ ನಿನ್ನೆ ಉಡುಪಿಯಿಂದ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಸರಕಾರದ ಸಾಧನೆ ಮತ್ತು ಯೋಜನೆಗಳ ಬಗ್ಗೆ ಜನತೆಗೆ ಮನವರಿಕೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ ಸರಕಾರ ತೆಗೆದುಕೊಂಡ ದಿಟ್ಟ ನಿರ್ಧಾರಗಳಿಂದ ದೇಶದಲ್ಲಿ ಸುಭದ್ರ ಸರಕಾರ ರಚನೆಯಾಗಿದೆ. ಈ ವಿಚಾರಗಳನ್ನು ಜನತೆಗೆ ಮನವರಿಕೆ ಮಾಡಿಕೊಡಲಾಗುವುದು. ಮುಂದಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ರಾಜ್ಯದ ಎಲ್ಲ ಗ್ರಾಪಂಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧಿಕಾರ ಪಡೆಯುವುದು ಪಕ್ಷದ ಗುರಿಯಾಗಿದೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ಸಂಸದ ಮುನಿಸ್ವಾಮಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಪ್ರತಾಪ್ ಸಿಂಹ ನಾಯಕ್, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮೇಯರ್ ದಿವಾಕರ ಪಾಂಡೇಶ್ವರ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಉದಯ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English