- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪುತ್ರಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ, ತಂದೆಗೆ ಜೀವಾವಧಿ ಕಠಿಣ ಶಿಕ್ಷೆ

father Rape daughter [1]ಉಡುಪಿ : ಪುತ್ರಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದ ಆರೋಪಿ ತಂದೆಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ವಿಧಿಸಿ ಇಂದು ಆದೇಶ ನೀಡಿದೆ.

ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ವರ್ಷಗಳ ಹಿಂದೆ ತನ್ನ 14 ವರ್ಷ ಪ್ರಾಯದ ಕಿರಿಯ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಇದನ್ನು 16 ವರ್ಷ ಪ್ರಾಯದ ಹಿರಿಯ ಮಗಳು ವಿರೋಧಿಸಿದ್ದಳು. ಮುಂದೆ ಪತ್ನಿ ಮೃತಪಟ್ಟ ನಂತರವೂ ಆರೋಪಿ ತನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದನ್ನು ಮುಂದುವರೆಸಿದ್ದ ಎಂದು ಆರೋಪಿಸಲಾಗಿತ್ತು.

ಆರೋಪಿಯ ಪತ್ನಿ ಮಾನಸಿಕ ಖಿನ್ನರಾಗಿದ್ದು, ನಂತರ ಮೃತರಾಗಿದ್ದರು, ಈ ಬಗ್ಗೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಮನಕ್ಕೆ ತಂದಿದ್ದು, ಅದರಂತೆ ಘಟಕದ ಕಾನೂನು ಪರಿ ವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ಯ, 2019 ಅಕ್ಟೋಬರ್ ತಿಂಗಳಿನಲ್ಲಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆರಂಭದಲ್ಲಿ ಕಾರ್ಕಳ ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ತನಿಖೆ ನಡೆಸಿದ್ದರು. ಬಳಿಕ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಈ ಬಗ್ಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶೆ ಯಾದವ್ ವನಮಾಲಾ ಆನಂದರಾವ್ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 26 ಮಂದಿ ಸಾಕ್ಷಿಗಳ ಪೈಕಿ ಸಂತ್ರಸ್ತ ಸಹೋದರಿಯರು ಹಾಗೂ ದೂರುದಾರರು ಸೇರಿದಂತೆ 8 ಮಂದಿ ವಿಚಾರಣೆ ನಡೆಸಿದ್ದರು. ಆರೋಪಿ ತಂದೆ ನಡೆಸಿದ ಕೃತ್ಯ ಸಾಬೀತಾಗಿರುವುದಾಗಿ ಅಭಿಪ್ರಾಯಪಟ್ಟು, ಪೋಕ್ಸೋ ತಿದ್ದುಪಡಿ ಕಾಯ್ದೆ 2019ರಂತೆ ಆರೋಪಿಗೆ ಜೀವಮಾನ ಪರ್ಯಂತ ಕಠಿಣ ಜೈಲು ಶಿಕ್ಷೆ ಹಾಗೂ 15,000 ದಂಡ ವಿಧಿಸಿ ಆದೇಶ ನೀಡಿದರು. ಉಡುಪಿಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕಟಿಸಿರುವ ಪ್ರಥಮ ಘೋರ ಶಿಕ್ಷೆ ಇದಾಗಿದೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ 7 ವರ್ಷ ಕಠಿಣ ಜೈಲು ಶಿಕ್ಷೆ, ಕೊಲೆ ಬೆದರಿಕೆಗೆ 7 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ದಂಡ ಕಟ್ಟದಿದ್ದಲ್ಲಿ ಒಂದು ವರ್ಷ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ಒಂದನೇ ನೊಂದ ಬಾಲಕಿಗೆ 5 ಲಕ್ಷ ರೂ. ಪರಿಹಾರ ಮತ್ತು 2ನೇ ನೊಂದ ಬಾಲಕಿಗೆ 1.5 ಲಕ್ಷ ರೂ. ಪರಿಹಾರವನ್ನು ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಉಡುಪಿಯ ವಿಶೇಷ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದಾರೆ.