- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ 7 ಹೊಸ ಮಂತ್ರಿಗಳೊಂದಿಗೆ ವಿಸ್ತರಣೆ

BSY Cabinate [1]ಬೆಂಗಳೂರು  : ರಾಜಭವನದಲ್ಲಿ ಬುಧವಾರದಂದು 7 ಮಂದಿ ಶಾಸಕರಿಗೆ ರಾಜ್ಯಪಾಲ ವಜುಭಾಯಿವಾಲ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಏಳು ಮಂದಿ ಶಾಸಕರು ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟಕ್ಕೆ ಸೇರಿದ್ದಾರೆ.

ರಾಜಭವನದ ಗಾಜಿನಮನೆಯಲ್ಲಿ ಮಧ್ಯಾಹ್ನ 3.50 ಕ್ಕೆ ಪದ ಗ್ರಹಣ ನಡೆಯಿತು. ಎಲ್ಲರೂ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ಸ್ವೀಕರಿಸಿದರು. ಕ್ರಮವಾಗಿ ಉಮೇಶ ಕತ್ತಿ, ಮುರುಗೇಶ ನಿರಾಣಿ, ಅರವಿಂದ ಲಿಂಬಾವಳಿ, ಎಂಟಿಬಿ ನಾಗರಾಜ್‌, ಸಿ.ಪಿ.ಯೋಗೇಶ್ವರ್, ಎಸ್‌.ಅಂಗಾರ ಅವರು ಪ್ರಮಾಣ ಸ್ವೀಕರಿಸಿದರು.

ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಸಿ. ಪಿ.ಯೋಗೇಶ್ವರ್ ಹಾಗೂ ಆರ್. ಶಂಕರ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್. ಅಂಗಾರ ಮೊದಲ ಬಾರಿಗೆ ಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಮಹದೇವಪುರ ಕ್ಷೇತ್ರ ಶಾಸಕ ಅರವಿಂದ ಲಿಂಬಾವಳಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನ ಸಭಾಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ಹಾಗೂ ಹುಕ್ಕೇರಿ ವಿಧಾನ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಅವರು ದೇವರು ಹಾಗೂ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವಥ್‍ ನಾರಾಯಣ್ ಹಾಗೂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ. ಸೋಮಣ್ಣ, ಕಂದಾಯ ಸಚಿವ ಆರ್. ಅಶೋಕ ಸೇರಿದಂತೆ ಅನೇಕ ಸಚಿವರುಗಳು ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಂತಾದವರು ಇದ್ದರು.