- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೋನ 2ನೇ ಅಲೆ : ಮಂಗಳೂರಿನಲ್ಲಿ 144 (3) ಸೆಕ್ಷನ್ ಜಾರಿ

KV Rajendra [1]ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.

ಮಾರ್ಚ್‌ 29ರಿಂದಲೇ  ದ.ಕ. ಜಿಲ್ಲೆಯಲ್ಲಿ 144(3) ಸೆಕ್ಷನ್‌ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ ಪ್ರದೇಶದಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಸಭೆಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕರು ಗುಂಪಾಗಿ ಹೆಚ್ಚು ಸೇರುವಂತಹ ಜಾತ್ರೆ, ಮೇಳ, ಸಮಾವೇಶ, ಸಮ್ಮೇಳನ, ಆಚರಣೆ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೋನ ವೈರಸ್‌ ಸೋಂಕು ಹರಡುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಚ್‌ 29 ರಿಂದ ಮುಂದಿನ ಸೂಚನೆಯ ವರೆಗೆ ಜಿಲ್ಲೆಯಾದ್ಯಂತ ಮೇಲೆ ತಿಳಿಸಿರುವ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸ ಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ 5 ಜನಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ ಎನ್ನಲಾಗಿದೆ.