ಮಂಗಳೂರು : ಕೆಎಸ್ಸಾರ್ಟಿಸಿ ನೌಕರರು ಇಂದಿನಿಂದ ಆರಂಭಿಸಿರುವ ಮುಷ್ಕರಕ್ಕೆ ದ.ಕ. ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನೌಕರರು ಕರ್ತವ್ಯಕ್ಕೆ ಹಾಜರಾಗದ ಕಾರಣ ಬಸ್ ಗಳು ಡಿಪೋದಲ್ಲೇ ಉಳಿದುಕೊಂಡಿವೆ.
ವೇತನ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ ನೌಕರರು ರಾಜ್ಯ ವ್ಯಾಪಿ ಮುಷ್ಕರ ಆರಂಭಿಸಿದ್ದಾರೆ.
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ 470ಕ್ಕೂ ಅಧಿಕ ಬಸ್ ಗಳು ಬುಧವಾರ ನಿಲ್ದಾಣದಲ್ಲಿಯೇ ತಂಗಿವೆ. ಈ ನಡುವೆ ಸರಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಪ್ರಯಾಣ ಬೆಳೆಸುತ್ತಿರುವುದು ಕಂಡುಬರುತ್ತಿದೆ.
ಬಸ್ ಮುಷ್ಕರದ ಬಗ್ಗೆ ಮಾಹಿತಿ ಇದ್ದ ಕಾರಣದಿಂದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಪ್ರಯಾಣಿಕರ ಸಂಖ್ಯೆ ವಿರಳವಾಗಿ ಕಂಡುಬರುತ್ತಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಸುಳ್ಯದಲ್ಲೂ ಸಾರಿಗೆ ನೌಕರರ ಮುಷ್ಕರ ಪರಿಣಾಮ ಬೀರಿದ್ದು, ಯಾವುದೇ ಕೆಎಸ್ಸಾರ್ಟಿಸಿ ಬಸ್ ಗಳು ರಸ್ತೆಗಿಳಿದಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.
ಖಾಸಗಿ ಬಸ್ ಗಳು, ವ್ಯಾನ್ ಗಳು ಪ್ರಯಾಣಿಕರನ್ನು ಕರೆದೊಯ್ಯಲು ಸಿದ್ಧವಾಗಿ ನಿಂತಿವೆ. ಬಸ್ ಸಂಚಾರ ಸ್ಥಗಿತಗೊಂಡ ಕಾರಣ ತಾಲೂಕಿನ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ.
Click this button or press Ctrl+G to toggle between Kannada and English