ಮಂಗಳೂರು : ಆಕ್ಸಿಜನ್ ಕೊರತೆಯನ್ನು ನೀಗಿಸಲು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಹಾಗೂ ಸಕಾಲದಲ್ಲಿ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದಿಸಲು ವೆನ್ಲಾಕ್ ಆಸ್ಪತ್ರೆಯಲ್ಲಿ ಹೊಸದಾಗಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಬಗ್ಗೆ ಯೋಜನೆ ರೂಪಿಸಲಾಗಿದೆ. ಮುಂದಿನ 50 ದಿನಗಳೊಳಗೆ ಈ ಪ್ಲಾಂಟ್ ನಿರ್ಮಾಣವಾಗಲಿದೆ. ಈಗಾಗಲೇ ಇಎಸ್‌ಐ ಹಾಗೂ ಬಂಟ್ವಾಳದ ತಾಲೂಕು ಆಸ್ಪತ್ರೆಯಲ್ಲಿ ಎಂಸಿಎಫ್ ವತಿಯಿಂದ ಸಿಎಸ್‌ಆರ್ ಅನುದಾನದಡಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸುವ ಬಗ್ಗೆ ನಿರ್ಧರಿಸಲಾಗಿದೆ. ಎಂಆರ್‌ಪಿಎಲ್ ಮೂಲಕ ಇನ್ನೊಂದು ಆಕ್ಸಿಜನ್ ಪ್ಲಾಂಟ್ ನಿರ್ಮಾಣದ ಬಗ್ಗೆ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಡಿಸಿ ಹೇಳಿದರು.
ಸಭೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್, ಆಕ್ಸಿಜನ್ ಪೂರೈಕೆದಾರರು, ಐಎಂಎ ವೈದ್ಯರ ತಂಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English