ಕೋವಿಡ್ ನಿರ್ವಹಣೆ ಕುರಿತು ಶಾಸಕರು, ಸಂಸದರೊಂದಿಗೆ ಸಿಎಂ ಸಂವಾದ

9:16 PM, Saturday, May 29th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

cm talkಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಸಂಸದರು ಮತ್ತು ಶಾಸಕರೊಂದಿಗೆ ವಿಡಿಯೋ ಸಂವಾದ ನಡೆಸಿ ಕೋವಿಡ್ – 19ರ ಸೋಂಕು ತಡೆಗಟ್ಟುವ ಕುರಿತಂತೆ ಚರ್ಚೆ ನಡೆಸಿದರು.

ಎರಡೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಸವಾಲುಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಪಾಸಿಟಿವಿಟಿ ದರ ಶೇಕಡ 10ಕ್ಕಿಂತ ಕಡಿಮೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಮರಣ ಪ್ರಮಾಣ ರಾಜ್ಯದಲ್ಲಿ ಶೇಕಡ 1.7 ಇದ್ದು, ಇದನ್ನು ಕಡಿಮೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇಕಡ 60 ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಕಡಿಮೆ ಗೊಳಿಸಲು ಹಾಗೂ ಮರಣ ಪ್ರಮಾಣವು ಹೆಚ್ಚಾಗಿದ್ದು, ಇದನ್ನು ನಿಯಂತ್ರಿಸಲು ಎಲ್ಲಾ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಕೋವಿಡ್ – 19 ರ ಎರಡನೇ ಅಲೆ ನಿರೀಕ್ಷೆಗೂ ಮೀರಿ ತೀವ್ರವಾಗಿ ಬಾಧಿಸಿದೆ. ಆದರೆ ಈಗ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಸಮಾಧಾನದ ಸಂಗತಿ. ಕೋವಿಡ್ ಸೋಂಕು ತೀವ್ರವಾಗಿದ್ದಾಗ ಎಲ್ಲ ಜನ ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಕೈಜೋಡಿಸಿ ಸೋಂಕು ನಿಯಂತ್ರಣಕ್ಕೆ ಶ್ರಮಿಸಿದ್ದಕ್ಕೆ ಮುಖ್ಯಮಂತ್ರಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಆದರೆ ಪ್ರಕರಣ ಕಡಿಮೆಯಾಗುತ್ತಿರುವ ಕುರಿತು ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಕುರಿತಂತೆ ನಾವು ಹೆಚ್ಚಿನ ಗಮನ ಹರಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್ ಬದಲು ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‍ಗಳಿಗೆ ದಾಖಲಿಸಲು ಮನವೊಲಿಸಬೇಕಾಗಿದೆ. ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ ಸೋಂಕಿತರನ್ನು ಪತ್ತೆ ಹಚ್ಚಿ ಸಕಾಲದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರೆ ಇದರಿಂದ ಮರಣ ಪ್ರಮಾಣ ಕಡಿಮೆಯಾಗುವುದು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳು, ಔಷಧ, ಆಮ್ಲಜನಕ ವಿವಿಧ ಉಪಕರಣಗಳು ಅಗತ್ಯತೆಗೆ ಅನುಗುಣವಾಗಿ ಸಮರ್ಪಕವಾಗಿ ಹಂಚಿಕೆಯಾಗಬೇಕು ಎಲ್ಲಿಯೂ ಸಮಸ್ಯೆ ತಲೆದೋರದಂತೆ ಸಂಪನ್ಮೂಲಗಳ ದಕ್ಷ ಬಳಕೆಯನ್ನು ಖಾತ್ರಿಪಡಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸಂವಾದದಲ್ಲಿ ಭಾಗವಹಿಸಿದ ಶಾಸಕರು, ಸಂಸದರು, ಕೋವಿಡ್ – 19 ರ ನಿರ್ವಹಣೆ ಜೊತೆಗೆ ತಳ ಹಂತದ ಹಲವಾರು ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ಇವುಗಳನ್ನು ಶೀಘ್ರವಾಗಿ ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು.

ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡುಗಡೆಗೆ ಈಗಾಗಲೇ ಕ್ರಮ ವಹಿಸಲಾಗಿದ್ದು, ಎರಡು ಮೂರು ದಿನಗಳಲ್ಲಿಯೇ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರತಿ ತಾಲ್ಲೂಕಿಗೆ 25 ಲಕ್ಷ ರೂ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಸರ್ಕಾರವು ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 50 ಲಕ್ಷ ರೂಗಳ ಅನುದಾನವನ್ನು ಕೋವಿಡ್ ನಿರ್ವಹಣೆಗೆ ಬಳಕೆ ಮಾಡಲು ಅನುಮತಿ ನೀಡಲಾಗಿದೆ ಅಲ್ಲದೆ ಗ್ರಾಮ ಪಂಚಾಯತಿಗಳಿಗೆ ತಲಾ 50 ಸಾವಿರ ರೂಗಳನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ವೈದ್ಯರ ಕೊರತೆ ಕುರಿತು ಚರ್ಚೆ ನಡೆಯಿತು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಈಗಾಗಲೇ 1200 ವೈದ್ಯರ ನೇಮಕ ಮಾಡಿಕೊಳ್ಳುತ್ತಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

ವರದಿ :ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯುರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English