- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ, ಉಳಿದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಯಥಾಸ್ಥಿತಿ

CM Yedyurappa [1]ಬೆಂಗಳೂರು : ರಾಜ್ಯದ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾದ ಪ್ರದೇಶದಲ್ಲಿ ಜೂನ್ 14 ರಿಂದ  ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಜೂ.10 ರಂದು ಸಿಎಂ ಯಡಿಯೂರಪ್ಪ ಕೋವಿಡ್-19 ತಡೆ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ.

ಪರಿಷ್ಕೃತ ನೀತಿಯ ಪ್ರಕಾರವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ ಮುಂದುವರೆಸಿದರೆ, ಉಳಿದ 19 ಜಿಲ್ಲೆಗಳಲ್ಲಿ ಸೆಮಿ ಲಾಕ್ ಡೌನ್ ನ್ನು ಘೋಷಣೆ ಮಾಡಲಾಗಿದೆ.

ಇದೇ ವೇಳೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಸಿ.ಎಂ ಹೇಳಿದ್ದಾರೆ.

ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ. ಅಂದರೆ ಈ ಜಿಲ್ಲೆಗಳಲ್ಲಿ ಲಾಕ್ ಡೌನ್ ಗೆ ಸಂಬಂಧಿಸಿದ ನಿಯಮಗಳು ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.

ಉಳಿದ ಜಿಲ್ಲೆಗಳಲ್ಲಿ ಪರಿಷ್ಕೃತ ನಿಯಮಗಳು ಜೂ.14 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ ಜೂ.21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಕೋವಿಡ್-19 ಪ್ರಸರಣ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಸಡಿಲಿಕೆಯಾದ ನಿರ್ಬಂಧಗಳ ಬಗ್ಗೆ ಮಾಹಿತಿ ಹೀಗಿದೆ..

*ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಕೈಗಾರಿಕೆಗಳಿಗೆ ಮಾತ್ರ ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ.

*ಎಲ್ಲಾ ಅಗತ್ಯ ಪದಾರ್ಥ ಖರೀದಿಸುವುದಕ್ಕೆ ಅನುವು ಮಾಡಿಕೊಡಲು ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

*ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ.

*ಪಾರ್ಕ್ ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

*ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿದೆ.

*ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ.

* ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

*  ರಾಜ್ಯಾದ್ಯಂತ ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.