ಬೆಂಗಳೂರು : ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತಲೂ ಕಡಿಮೆ ಇರುವುದರಿಂದ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್, ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ.
ಇಲ್ಲಿಸೋಮವಾರದಿಂದ ಹೋಟೆಲ್ ಆರಂಭಿಸಲು, ಅಂಗಡಿ ಮುಂಗಟ್ಟುಗಳನ್ನು ಸಂಜೆ 5 ಗಂಟೆಯವರೆಗೂ ತೆರೆಯಲು ಅವಕಾಶ ನೀಡಲಾಗಿದೆ. ಹೋಟೆಲ್ ಗಳಲ್ಲಿ ಕುಳಿತು ತಿನ್ನಲು ಅವಕಾಶವಿದೆ. ಆದರೆ, ಶೇ. 50 ರಷ್ಟು ಗ್ರಾಹಕರಿಗೆ ಮಾತ್ರ ಅನುಮತಿ ನೀಡಲಾಗಿದೆ. ಬಾರ್ ನಲ್ಲಿ ಕುಳಿತು ಊಟ ಮಾಡಲು ಅವಕಾಶವಿದೆ. ಮದ್ಯ ಪೂರೈಕೆಗೆ ಅವಕಾಶ ಇಲ್ಲ ಎಂದರು.
ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶೇಕಡಾ 50 ರಷ್ಟು ಪ್ರಯಾಣಿಕರ ಮಿತಿಯೊಂದಿಗೆ ಅವಕಾಶ ಮಾಡಿಕೊಡಲಾಗಿದೆ. ಮೆಟ್ರೋ ರೈಲು ಕೂಡಾ ಶೇಕಡಾ 50 ರಷ್ಟು ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ರೆಸಾರ್ಟ್ ಮತ್ತು ಲಾಡ್ಜ್ ಗಳಲ್ಲಿ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಶೇ 50 ರಷ್ಟು ಸಾಮರ್ಥ್ಯದೊಂದಿಗೆ ಹೊರಾಂಗಣ ಚಿತ್ರೀಕರಣ, ಹವಾನಿಯಂತ್ರಣವಿಲ್ಲದೆ ಜಿಮ್ ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಮಂದಿರ, ದೇಗುಲ, ಮಾಲ್ ಗಳಲ್ಲಿ ನಿರ್ಬಂಧ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಶೇ.5 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವಿರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11 ರಂದು ಹೊರಡಿಸಿರುವ ಮಾರ್ಗಸೂಚಿಗಳು ಮುಂದುವರೆಯುತ್ತವೆ
ಮೈಸೂರಿನಲ್ಲಿ ಲಾಕ್ ಡೌನ್ ಯಥಾಸ್ಥಿತಿ: ಶೇಕಡಾ10ಕ್ಕಿಂತಲೂ ಹೆಚ್ಚಿನ ಪಾಸಿಟಿವಿಟಿ ದರ ಹೆಚ್ಚಿರುವ ಮೈಸೂರಿನಲ್ಲಿ ಈಗಿರುವ ಲಾಕ್ ಡೌನ್ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಯಡಿಯೂರಪ್ಪ ಹೇಳಿದರು.
ನೈಟ್ ಕರ್ಫ್ಯೂ, ವಾರಾಂತ್ಯ ಕರ್ಫ್ಯೂ ಮುಂದುವರಿಕೆ: ಪ್ರತಿನಿತ್ಯ ನೈಟ್ ಕರ್ಫ್ಯೂ ಸಂಜೆ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಮುಂದುವರೆಯುತ್ತದೆ. ವಾರಾಂತ್ಯ ಕರ್ಫ್ಯೂ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಮುಖ್ಯಾಂಶಗಳು
• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.
• ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.
• ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
• ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
• ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
• ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.
• ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
• ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.
ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ಬಸ್ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.
Click this button or press Ctrl+G to toggle between Kannada and English