ಎಸ್ಸೆಸ್ಸೆಲ್ಸಿ ಪರೀಕ್ಷೆ : ಅಚ್ಚುಕಟ್ಟಿನ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

11:36 PM, Saturday, July 3rd, 2021
Share
1 Star2 Stars3 Stars4 Stars5 Stars
(No Ratings Yet)
Loading...

SSlc Examಮಂಗಳೂರು : ಜು. 19 ಹಾಗೂ 22 ರಂದು ನಡೆಯಲಿರುವ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಅವಗಡಗಳು ಎದುರಾಗದಂತೆ ಅಚ್ಚುಕಟ್ಟಿನ ಸಿದ್ಧತೆಗಳನ್ನು ಮಾಡಿಕೊಂಡು ಸುಸೂತ್ರವಾಗಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜು.3ರ ಶನಿವಾರ ಹಮ್ಮಿಕೊಳ್ಳಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಪೂರ್ವಭಾವಿ ಸಿದ್ಧತೆಗಳ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆ ಯಾವುದೇ ವಿದ್ಯಾರ್ಥಿಯ ಪ್ರಮುಖ ಘಟ್ಟ, ಇಂತಹ ಪ್ರಮುಖ ಪರೀಕ್ಷೆಯಲ್ಲಿ ಯಾವುದೇ ರೀತಿಯ ಸಣ್ಣಪುಟ್ಟ ತಪ್ಪುಗಳಿಗೂ ಅವಕಾಶವಿರಬಾರದು, ಹಾಗಾಗಿ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕು, ಕಳೆದ ಬಾರಿಯ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ ಹದಿನೆಂಟು ವಿದ್ಯಾರ್ಥಿಗಳಿಗೆ ಅವಕಾಶವಿತ್ತು, ಈ ಬಾರಿ 12 ವಿದ್ಯಾರ್ಥಿಗಳಿಗೆ ಸೀಮಿತಗೊಳಿಸಲಾಗಿದೆ, ಇದು ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತ್ತಷ್ಟು ಅನುಕೂಲವಾಗಿದೆ, ಕೇರಳದ ಗಡಿಭಾಗದಿಂದ ಈ ಪರೀಕ್ಷೆ ಬರೆಯಲು 441 ವಿದ್ಯಾರ್ಥಿಗಳು ಬರುತ್ತಿದ್ದಾರೆ, ಅವರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಈಗಿನಿಂದಲೇ ಕ್ರಮಕೈಗೊಳ್ಳಬೇಕು, ಸಾರಿಗೆ ಇಲಾಖೆಯಿಂದ ಪರೀಕ್ಷಾರ್ಥಿಗಳ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಬೇಕು, ಪಾಸಿಟಿವ್ ಲಕ್ಷಣವುಳ್ಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ವ್ಯವಸ್ಥೆ ಆಗಬೇಕು, ಅಲ್ಲಿ ಅಗತ್ಯ ಪೀಠೋಪಕರಣ ವ್ಯವಸ್ಥೆ ಮಾಡಿ ಪರೀಕ್ಷೆಗೆ ನೆರವಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನಿಯೋಜಿಸಿರುವ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್ ವ್ಯಾಕ್ಸಿನ್ ಪಡೆದಿರಬೇಕು, ಪಡೆಯದವರನ್ನು ಆದ್ಯತೆ ಮೇರೆಗೆ ಇಂಜೆಕ್ಷನ್ ಕೊಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಅವರಿರುವ ಸ್ಥಳಗಳಿಂದ ಕರೆತರಲು ಸಾರಿಗೆ ವ್ಯವಸ್ಥೆ ರೂಪಿಸಿಕೊಳ್ಳಬೇಕು, ಖಾಸಗಿ ಬಸ್ಗಳು ಅಂದು ಕ್ಯಾನ್ಸಲ್ ಆಗದಂತೆ ನೋಡಿಕೊಳ್ಳಬೇಕು, ಕೇರಳದಿಂದ 441 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬರಲಿದ್ದು, ಅವರನ್ನು ಕರೆತರಲಿರುವ ಅವರ ಪೋಷಕರು ಕಡ್ಡಾಯವಾಗಿ ಆರ್ ಟಿ ಪಿ ಸಿ ಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಿಳಿಸಬೇಕು, ಕೋವಿಡ್ ಪಾಸಿಟಿವ್ ಕಂಡುಬಂದ ವಿದ್ಯಾರ್ಥಿಗಳನ್ನು ಆಂಬುಲೆನ್ಸ್ ನಲ್ಲಿ ಕರೆತರಬೇಕು, ಈ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು, ಅಲ್ಲಿ ಮೇಜು, ಕುರ್ಚಿ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು, ಹಾಗೂ ಪಿಪಿ ಕಿಟ್ ಹಾಕಿಕೊಂಡು ಅವರಿಗೆ ಪ್ರಶ್ನೆಪತ್ರಿಕೆ ನೀಡಬೇಕು ಎಂದರು.

ಈ ಬಾರಿ ಬಹು ಆಯ್ಕೆ ಮಾದರಿಯ ಪ್ರಶ್ನೆ ಪತ್ರಿಕೆಗಳನ್ನು ರೂಪಿಸಲಾಗುತ್ತಿದ್ದು, ಒಎಮ್ ‌ಆರ್ ಶೀಟ್ ಗಳ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಹಾಗೂ ಹೆದರಿಕೆ ಬಾರದಂತೆ ಅವರಲ್ಲಿ ಜಾಗೃತಿ ಮೂಡಿಸಬೇಕು, ಪರೀಕ್ಷೆಗಳ ನಡುವೆ ಎರಡು ದಿನಗಳ ಅಂತರವಿದ್ದು ಈ ಸಂದರ್ಭದಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ರಚಿಸಲಾಗಿರುವ ಪರೀಕ್ಷಾ ಕೊಠಡಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಜ್ ಮಾಡಬೇಕು, ಪ್ರಮುಖವಾಗಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಎಚ್ಚರವಹಿಸಬೇಕು ಹಾಗೂ ಪೊಲೀಸರು ಬಿಗಿ ಭದ್ರತೆ ಒದಗಿಸಬೇಕು ಈ ಬಾರಿ ಪರೀಕ್ಷಾ ಕೇಂದ್ರಕ್ಕೆ ಎರಡು ಗಂಟೆಗಳ ಮುಂಚಿತವಾಗಿ ಆಗಮಿಸಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಲ್ಲಯ್ಯಸ್ವಾಮಿ ಮಾತನಾಡಿ, ಈ ಬಾರಿ 179 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿತ್ತು 2 ದಿನಗಳ ಕಾಲ ಪರೀಕ್ಷೆ ನಡೆಯಲಿದೆ ಕಳೆದ ಬಾರಿ ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿತ್ತು ಈ ಬಾರಿ 12 ಮಕ್ಕಳಿಗೆ ಒಂದು ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಜಿಲ್ಲೆಯಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಎದುರಿಸಲಿದ್ದಾರೆ, ಕೋವಿಡ್ ಲಕ್ಷಣಗಳು ಬಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಕೊಠಡಿಗಳನ್ನು ಕಾಯ್ದಿರಿಸಲಾಗಿದೆ, ಒಟ್ಟು 3,708 ಸಿಬ್ಬಂದಿಗಳು ಸಜ್ಜಾಗಿದ್ದಾರೆ, 2,718 ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಹೇಳಿದರು‌.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮಾತನಾಡಿ, ಪರೀಕ್ಷೆಗೆ ಬಿಗಿ ಭದ್ರತೆ ಒದಗಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಮಾರ್ ಹಾಗೂ ಶಾಸಕರಾದ ವೇದವ್ಯಾಸ ಕಾಮತ್ ಅವರು ವೇದಿಕೆಯಲ್ಲಿದ್ದರು.

ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English