ಬೆಂಗಳೂರು: ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕ ವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಗುರುವಾರ ಬೆಂಗಳೂರು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನೆಲಗದೇರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.
ಅತ್ಯಂತ ಗುಣಮಟ್ಟದ ಶಿಕ್ಷಣ ನೀಡುವ ನೆಲಗದೇರನಹಳ್ಳಿ ಸರ್ಕಾರಿ ಶಾಲೆಯಲ್ಲಿ ದಾಖಲಾತಿಗಾಗಿ ಹಲವು ಕಡೆಗಳಿಂದ ಬೇಡಿಕೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಸಚಿವರು, ಶಾಲಾ ದಾಖಲಾತಿಗಾಗಿ ಸರದಿ ಸಾಲಿನಲ್ಲಿ ನಿಂತಿದ್ದ ಮಕ್ಕಳು ಮತ್ತು ಪೋಷಕರನ್ನು ಮಾತನಾಡಿಸಿದರು.
ಶಾಲೆಯಲ್ಲಿ ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಯ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಸದಸ್ಯರು ಮತ್ತು ಶಿಕ್ಷಕರೊಂದಿಗೆ ಚರ್ಚೆ ನಡೆಸಿದರು.
ಮೊದಲೆಲ್ಲಾ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೊಂದಲು ಪ್ರಭಾವ ತರುವುದನ್ನು ಕಾಣುತ್ತಿದ್ದೆವು. ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಿಸಿರುವುದರಿಂದ ಈಗ ಇಂತಹ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪಡೆಯಲು ಹಲವಾರು ಮಂದಿ ಶಾಸಕರು ಮತ್ತು ಸಚಿವರ ಮೂಲಕ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ರಾಜ್ಯದೆಲ್ಲೆಡೆ ದಾಖಲಾತಿ ಪ್ರಕ್ರಿಯೆ ಮುಂದುವರೆದಿದ್ದು, ಚಂದನಾ ದೂರದರ್ಶನ ವಾಹಿನಿಯಲ್ಲಿ ಸಂವೇದಾ ಪಾಠಗಳು ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಗಣನೀಯ ಸಂಖ್ಯೆಯಲ್ಲಿ ಹೆಚ್ಚಾಗಿರುವುದು ಕಂಡು ಬರುತ್ತಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ದಾಸರಹಳ್ಳಿ ವಿಧಾನಸಭಾ ಸದಸ್ಯ ಮಂಜುನಾಥ್ ಮತ್ತಿತರರು ಹಾಜರಿದ್ದರು.
Click this button or press Ctrl+G to toggle between Kannada and English