- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ತಿಂಗಳೊಳಗಾಗಿ ಪೂರ್ಣಗೊಳಿಸಿ: ಸಚಿವ ಕೆ.ಎಸ್.ಈಶ್ವರಪ್ಪ

eswarappa [1]ಮೈಸೂರು :- ಕೇಂದ್ರ ಸರ್ಕಾರವು ವಿಶೇಷವಾಗಿ ಆಸಕ್ತಿವಹಿಸಿರುವ ಕುಡಿಯುವ ನೀರಿನ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ವಿಳಂಬವಾಗಿರುವ ಕಾಮಗಾರಿಗಳನ್ನು ಜುಲೈ ತಿಂಗಳೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.

ಶುಕ್ರವಾರ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ, ಜಲಜೀವನ್ ಮಿಷನ್ ಸೇರಿದಂತೆ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಕೋವಿಡ್-19 ಸೋಂಕು ಗ್ರಾಮೀಣ ಪ್ರದೇಶದಲ್ಲಿ ಹರಡುವುದುನ್ನು ತಡೆಯಲು ಗ್ರಾಮ ಪಂಚಾಯಿತಿಗಳು ಅನುಸರಿಸಿದ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಈ ಯೋಜನೆಯನ್ನು ಪೂರ್ಣಗೊಳಿಸಲು 294 ಕೋಟಿ ಹಣ ಇದ್ದರೂ ಕೂಡ ಕಾಮಗಾರಿಯು ಆಮೆಗತಿಯಲ್ಲಿ ಸಾಗುತ್ತಿದೆ. ಶಾಸಕರ ಸಲಹೆಗಳನ್ನು ಪಡೆದು ಹಣವನ್ನು ಸದುಪಯೋಗ ಮಾಡಿ ಆದಷ್ಟು ಬೇಗ ಕಾಮಗಾರಿ ಮುಗಿಸಬೇಕು. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯ ಮಟ್ಟದಲ್ಲಿ ಒಂದು ಕೆರೆ ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದರು.

ಕೋವಿಡ್ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅತಿ ಹೆಚ್ಚು ಮಂದಿ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಅವರನ್ನು ಕಡ್ಡಾಯವಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಿ. ಕೋವಿಡ್ ಗುಣವಾದ ನಂತರ ಅವರನ್ನು ಸಿಸಿಸಿಯಲ್ಲಿ ಇರಿಸಿ ನಿಗಾವಹಿಸಿ. ಪೂರ್ಣವಾಗಿ ಗುಣಮುಖರಾದ ನಂತರ ಅವರನ್ನು ಮನೆಗೆ ಕಳುಹಿಸಿ ಎಂದರು.

ಕೋವಿಡ್ ಸೋಂಕಿತರು ಮನೆಯಲ್ಲಿ ಇದ್ದರೆ ಯಾವುದೇ ನಿಯಮಗಳನ್ನು ಪಾಲಿಸದೆ ಇತರರಿಗೆ ಹರಡಿಸುವ ಸಾಧ್ಯತೆ ಇರುತ್ತದೆ. ಅವರಿಗೆ ಮನವೊಲಿಸಿ. ಇಲ್ಲದಿದ್ದರೆ ಪೊಲೀಸರ ಸಹಾಯ ಪಡೆದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಎಂದು ತಿಳಿಸಿದರು.

ಈಗಾಗಲೇ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ‌. ಅದನ್ನು ಹೋಬಳಿಯ ಕಾಲೇಜಿಗೂ ತಲುಪುವಂತೆ ನೋಡಿಕೊಳ್ಳಿ. ಕೋವಿಡ್ ನ 3ನೇ ಅಲೆಯೂ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಈಗಲೇ ಮುಂಜಾಗ್ರತ ಕ್ರಮಗಳನ್ನು ವಹಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಸಭೆಯಲ್ಲಿ ಶಾಸಕರಾದ ಸಾ.ರಾ.ಮಹೇಶ್, ಕೆ.ಮಹದೇವ್, ಅಶ್ವಿನ್ ಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಸದಸ್ಯ ಅಡಗೂರು ಹೆಚ್.ವಿಶ್ವನಾಥ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಜಿಲ್ಲಾ ಪಂಚಾಯಿತಿಯ ಸಿಇಒ ಎ.ಎಂ.ಯೋಗೀಶ್ ಸೇರಿದಂತೆ ಇತರರು ಹಾಜರಿದ್ದರು.