ಮಂಗಳೂರು : ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಭೇಟಿ ಮಾಡಿ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡರು.
ನಗರದ ಕೋಡಿಯಲ್ ಬೈಲ್ ನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಸ್ಕರ್ ಅವರನ್ನು ಭೇಟಿ ಮಾಡಿದರು. ಅಲ್ಲದೆ, ಆಸ್ಕರ್ ಅವರ ಕುಟುಂಬಸ್ಥರು, ವೈದ್ಯರೊಂದಿಗೆ ಚರ್ಚೆ ನಡೆಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿವಕುಮಾರ್ ಆಸ್ಕರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದಾರೆ. ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಪ್ರಸ್ತುತ ಅವರು ಅನಾರೋಗ್ಯದಲ್ಲಿದ್ದು, ಐಸಿಯುವಿನಲ್ಲಿರುವ ಹಿನ್ನೆಲೆ ಸ್ವಲ್ಪ ಆತಂಕವಿದೆ. ವೈದ್ಯರು ತಮ್ಮ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಆಸ್ಪತ್ರೆಗಳು ಉತ್ತಮವಾಗಿ ಸೇವೆ ನೀಡುತ್ತಿವೆ. ಅವರು ಶೀಘ್ರ ಗುಣಮುಖರಾಗಲೆಂದು ನಾವು ಪ್ರಾರ್ಥಿಸುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಅವರು ಅಸೌಖ್ಯರಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನಲ್ಲಿ ನಡೆಯಬೇಕಾಗಿದ್ದ ಸಭೆ ರದ್ದು ಮಾಡಿರುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.
ಮಾಜಿ ಮುಖ್ಯ ಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡುತ್ತಾ ಹಿರಿಯ ನಾಯಕ ಆಸ್ಕರ್ ಅವರ ಚೇತರಿಕೆಗೆ ಎಲ್ಲರೂ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್ ಆರ್.ಪಾಟೀಲ್, ಸಲೀಂ ಅಹಮ್ಮದ್ ,ದ್ರುವ ನಾರಾಯಣ್ ಅವರನ್ನೊಳಗೊಂಡ ಕಾಂಗ್ರೆಸ್ ಹಿರಿಯ ನಾಯಕರ ತಂಡ ನಗರದ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಕಾಂಗ್ರೆಸ್ ನ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ರ ಆರೋಗ್ಯದ ಬಗ್ಗೆ ವೈದ್ಯರ ಬಳಿ ವಿಚಾರಿಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯ ಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್ .ಲೋಬೊ, ಮೊಹಿಯುದ್ದೀನ್ ಬಾವ, ವಸಂತ ಬಂಗೇರ, ಐವನ್ ಡಿಸೋಜ, ಗೋಪಾಲ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಪಿ.ವಿ. ಮೋಹನ್, ಮಂಜುನಾಥ ಭಂಡಾರಿ, ಶಾಹುಲ್ ಹಮೀದ್ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English