- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜೀನಾಮೆ

BS Yediyurappa [1]ಬೆಂಗಳೂರು: ಸರ್ಕಾರ ಎರಡು ವರ್ಷ ಪೂರೈಸುತ್ತಿದ್ದಾಗಲೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಬಿಜೆಪಿ ಸರ್ಕಾರದ ಸಾಧನಾ ಪರ್ವ ಸಮಾವೇಶದಲ್ಲಿ ಅತ್ಯಂತ ಭಾವುಕರಾಗಿ ಮಾತನಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ನಂತರ ನೇರವಾಗಿ ರಾಜಭವನಕ್ಕೆ ಬಿ ಎಸ್ ಯಡಿಯೂರಪ್ಪ ಕಾರಿನಲ್ಲಿ ತೆರಳಿದರು. ನೇರವಾಗಿ ರಾಜಭವನಕ್ಕೆ ಬಂದು ರಾಜೀನಾಮೆ ಪತ್ರವನ್ನು ರಾಜ್ಯಪಾಲ ಗೆಹ್ಲೋಟ್ ಅವರಿಗೆ ಸಲ್ಲಿಸಿದರು.

ಮುಂದಿನ ಸಿಎಂ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ಬಿ ಎಸ್ ಯಡಿಯೂರಪ್ಪನವರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ರಾಜಭವನ ಸುತ್ತಮುತ್ತ ತೀವ್ರ ಭದ್ರತೆ ಕಲ್ಪಿಸಲಾಗಿದೆ.

ಸರಿಯಾಗಿ ಎರಡು ವರ್ಷಗಳ ಹಿಂದೆ 2019ರ ಜುಲೈ 26ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಅಧಿಕಾರಕ್ಕೆ ಏರಿದ್ದರು. ಆಪರೇಷನ್ ಕಮಲ ಮೂಲಕ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಕೆಡವಿ ದಕ್ಷಿಣ ಭಾರತದಲ್ಲಿ ಕೇಸರಿ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡುವಂತೆ ಮಾಡಿದ ಕೀರ್ತಿ, ಯಶಸ್ಸು ಯಡಿಯೂರಪ್ಪನವರಿಗೆ ಸಲ್ಲಬೇಕು.

ಇತ್ತ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಿದ ಕೂಡಲೇ ಅತ್ತ ದೆಹಲಿಯಲ್ಲಿ ಮುಂದಿನ ಸಿಎಂ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡ ಮತ್ತು ಅಮಿತ್ ಶಾ ಗಾಢವಾದ ಚರ್ಚೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.