ಹುಬ್ಬಳ್ಳಿ ಧಾರವಾಡ ನಗರ ಅಭಿವೃದ್ಧಿಗೆ ಪ್ರಾಶಸ್ತ್ಯ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

5:44 PM, Thursday, July 29th, 2021
Share
1 Star2 Stars3 Stars4 Stars5 Stars
(No Ratings Yet)
Loading...

bommai
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಷೇಶ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳುವ ಮುನ್ನ ವಿಮಾನ ನಿಲ್ದಾಣದ‌ ಬಳಿ ಮಾಧ್ಯಮ‌ದವರೊಂದಿಗೆ ಮಾತನಾಡಿದರು.

ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತೇನೆ ಎಂದು ಅಂದುಕೊಂಡಿರಲಿಲ್ಲ. ಪಕ್ಷ ಹಾಗೂ ಕೇಂದ್ರದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆರ್ಶೀವಾದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದೇನೆ.‌ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಹಿರಿಯ ನಾಯಕರಾದ ಜಗದೀಶ ಶೆಟ್ಟರ್ ಹಾಗೂ ಅನೇಕ ಶಾಸಕ ಮಿತ್ರರು ಇಲ್ಲಿರುವುದರಿಂದ ಪಕ್ಷ ಇಲ್ಲಿ ಬಲಿಷ್ಠವಾಗಿದೆ. ಪಕ್ಷ ಹಾಗೂ ಪರಿವಾರದ ಹಿರಿಯರೊಂದಿಗೆ ಚರ್ಚೆ ಮಾಡಿ ಅವರ ಸಲಹೆ ಸೂಚನೆಗಳನ್ನು ಅನುಷ್ಠಾನ ಮಾಡಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ನಾಳೆ ಬೆಳಗ್ಗೆ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್ ನಾಯಕರು, ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡುತ್ತೇನೆ. ಮುಂದಿನ ಎರಡು ಮೂರು ದಿನಗಳಲ್ಲಿ ಮತ್ತೆ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸುತ್ತೇನೆ.ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಸಚಿವ ಸಂಪುಟ ಸೇರದಿರುವ ಕುರಿತು ತಮ್ಮ ಅಭಿಪ್ರಾಯವನ್ನು ಬಹಿರಂಗವಾಗಿ ಹೇಳಿದ್ದಾರೆ. ಅದಾಗ್ಯೂ ಸಹ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಈ ಕುರಿತು ಮಾತನಾಡುತ್ತೇನೆ. ರಾಜಕೀಯಕ್ಕೆ ಬರುವ ಮೊದಲಿನಿಂದಲೇ ನಾವಿಬ್ಬರೂ ಸ್ನೇಹಿತರು. ಅವರ ಬಗ್ಗೆ ಅಪಾರವಾದ ಅಭಿಮಾನ, ಪ್ರೀತಿ – ವಿಶ್ವಾಸ ಇದೆ. ಅವರೊಂದಿಗೆ ಮಾತನಾಡಿ ಅವರ ಬಯಕೆಯನ್ನು ತಿಳಿದುಕೊಂಡು ಪಕ್ಷದೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ ಎಂದರು.

ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಳಕ್ಕೆ ಕ್ರಮ

ಈ ಸಂದರ್ಭದಲ್ಲಿ ಮಾಧ್ಯಮಮಿತರ ಪ್ರಶ್ನೆಗೆ ಉತ್ತರಿಸಿದ ಅವರು ಕೃಷ್ಣಾ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಬ್ರಿಜೇಶ್ ಕುಮಾರ್ ಪಟೇಲ್ ಅವರ ನೇತೃತ್ವದಲ್ಲಿ ಟ್ರುಬ್ಯುನಲ್ ರಚಿಸಲಾಯಿತು. ಇದರ ತೀರ್ಪಿನಂತೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವ ಹಂತದಲ್ಲಿ ಆಂದ್ರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲು ಏರಿತು. ಮಹಾರಾಷ್ಟ್ರ ಹಾಗೂ ಕರ್ನಾಟಕ ಒಟ್ಟಾಗಿ ಇದನ್ನು ಎದುರಿಸುತ್ತಿದ್ದೇವೆ. ಮುಂದಿನ ಒಂದುವರೆ ತಿಂಗಳ ಒಳಗಾಗಿ ಸುಪ್ರೀಂಕೋರ್ಟ್ ತೀರ್ಪು ಬರಬಹುದು. ನಮ್ಮ ಪಾಲಿನ ನೀರಿನ ಬಳಕೆಗೆ ಅನುಮತಿ ದೊರೆಯುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ತಕ್ಷಣ ಪುನರ್ವಸತಿ ಕಾರ್ಯಕ್ರಮ ರೂಪಿಸಿ, ಆಲಮಟ್ಟಿ ಜಲಾಶಯದ ಎತ್ತರವನ್ನು ಏರಿಸಲಾಗುವುದು. ಈ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆಯಿದೆ. ಜಲಾಶಯದ ಎತ್ತರ ಹೆಚ್ಚಳದಿಂದ 13.50 ಲಕ್ಷ ಚದುರ ಪ್ರದೇಶ ನೀರಾವರಿಗೆ ಒಳಪಡುವುದು. ಇದಕ್ಕೆ ಪ್ರಾಶಸ್ತ್ಯ ನೀಡಿ ಕೆಲಸ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕಾರದ ಅಮೃತ ದೇಸಾಯಿ, ಅರಬೈಲು ಶಿವರಾಮ ಹೆಬ್ಬಾರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೋಲಿಸ್ ಆಯುಕ್ತ ಲಾಭುರಾಮ, ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Vedavyas Diwali

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English