ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು, ತಮ್ಮನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಪ್ರಧಾನಿಯವರ ನಿರೀಕ್ಷೆಗೆ ತಕ್ಕಂತೆ ಕೆಲಸ ನಿರ್ವಹಿಸುವುದಾಗಿ ತಿಳಿಸಿದರು. ಸುಮಾರು 40 ನಿಮಿಷಗಳಿಗೂ ಹೆಚ್ಚು ಕಾಲ ಪ್ರಧಾನಿಯವರೊಂದಿಗೆ ಪ್ರವಾಹ ಪರಿಸ್ಥಿತಿ, ಕೋವಿಡ್ ನಿಯಂತ್ರಣ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸುವಂತೆ ಪ್ರಧಾನಿಯವರು ಸಲಹೆ ಮಾಡಿದರು. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಪ್ರಧಾನಮಂತ್ರಿಯವರು ಭರವಸೆ ನೀಡಿದರು.
ಇದಕ್ಕೂ ಮುನ್ನ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಹೊಸದಾಗಿ ಸೃಜನೆಯಾದ ಸಹಕಾರ ಸಚಿವಾಲಯದ ಹೊಣೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಜೊತೆಗೆ ರಾಜ್ಯದ ಪ್ರವಾಹ ಪರಿಸ್ಥಿತಿ, ಕೋವಿಡ್ 19 ನಿರ್ವಹಣೆ ಮೊದಲಾದ ವಿಷಯಗಳ ಕುರಿತು ಮಾಹಿತಿ ನೀಡಿದರು. ಇದು ಪರೀಕ್ಷೆಯ ಸಮಯವೆಂದ ಗೃಹ ಸಚಿವರಿಗೆ ದಿನದ 24 ಗಂಟೆಯೂ ಕರ್ತವ್ಯ ನಿರ್ವಹಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾದ ಮುಖ್ಯಮಂತ್ರಿಯವರು ಮೇಕೆದಾಟು ಯೋಜನೆಗೆ ಅನುಮೋದನೆ ನೀಡುವಂತೆ ಹಾಗೂ ಕೃಷ್ಣಾ ಮೇಲ್ದಂಡೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕುರಿತು ಸಹ ಚರ್ಚೆ ನಡೆಸಲಾಯಿತು.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಷಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಅನುರಾಗ್ ಠಾಕುರ್ ಮೊದಲಾದವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನೂತನ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ಈ ಗಣ್ಯರು, ರಾಜ್ಯದ ಅಭಿವೃದ್ದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಧ್ಯಾಹ್ನ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಹಾಗೂ ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಯವರು ರಾಜ್ಯದ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯಲು ಹಾಗೂ ಕೇಂದ್ರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಹಕಾರ ನೀಡುವಂತೆ ಕೋರಿದರು. ಈ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಸಂಸದರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ತಿಳಿಸಿದರು. ನಾಡಿನ ನೆಲ, ಜಲದ ರಕ್ಷಣೆಯಲ್ಲಿ ಸಂಸದರು ಸಹಕರಿಸುವಂತೆ ಮನವಿ ಮಾಡಿದರು.
ತಮ್ಮ ದೆಹಲಿ ಭೇಟಿಯ ವಿವರಗಳನ್ನು ಮಾಧ್ಯಮದವರಿಗೆ ನೀಡಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಆರ್ಥಿಕ ಸುಸ್ಥಿರತೆ ಕಾಪಾಡುವುದು, ಪ್ರವಾಹ ಹಾಗೂ ಕೋವಿಡ್ ನಿಯಂತ್ರಣ ಆದ್ಯತೆಯ ವಿಷಯಗಳು ಎಂದು ತಿಳಿಸಿದರು.
Click this button or press Ctrl+G to toggle between Kannada and English