ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ

4:48 PM, Sunday, August 15th, 2021
Share
1 Star2 Stars3 Stars4 Stars5 Stars
(No Ratings Yet)
Loading...

Basavaraja Bommai ಬೆಂಗಳೂರು :  ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ, ಒಂದು ವಾರ ಕಾಲ ಶಾಲೆ ಮುಚ್ಚಿ, ಸ್ವಚ್ಛಗೊಳಿಸಿದ ನಂತರ ತೆರೆಯಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಶಾಲಾ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಆದ್ಯತೆ ಮೇರೆಗೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೋವಿಡ್ ನಿರ್ವಹಣೆಗೆ ಜಿಲ್ಲಾವಾರು ಯೋಜನೆ ರೂಪಿಸಲು ಸೂಚಿಸಲಾಯಿತು. ಆಯಾ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುವುದು.

ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಹಾಕಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು.

ಕೇರಳ ಮತ್ತು ಮಹಾರಾಷ್ಟ್ರ ಗಡಿ ಭಾಗದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿರುವ ರಾಜ್ಯದ ಹಳ್ಳಿಗಳಲ್ಲಿ ಲಸಿಕೆ ನೀಡುವುದನ್ನು ತೀವ್ರಗೊಳಿಸಲು ಹಾಗೂ ಪರೀಕ್ಷಾ ಪ್ರಮಾಣ ಹೆಚ್ಚಿಸಲು ತೀರ್ಮಾನಿಸಲಾಯಿತು.

ರಾಯಚೂರು, ಕಲಬುರಗಿ, ಬಳ್ಳಾರಿ, ಬೀದರ್, ಕೊಪ್ಪಳ, ಹಾವೇರಿ, ವಿಜಯಪುರ, ತುಮಕೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಕ್ಷಾ ಪ್ರಮಾಣ ಹೆಚ್ಚಿಸಲು ನಿರ್ಧರಿಸಲಾಯಿತು.

ಮುಂದಿನ ಎರಡು ವಾರದಲ್ಲಿ ರಾಜ್ಯದಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಗಳಲ್ಲಿ ಆರು ಜಿನೋಮ್ ಪರೀಕ್ಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಸೂಚಿಸಲಾಗಿದೆ. ಡೆಲ್ಟಾ ವೇರಿಯೆಂಟ್ ವೈರಸ್ ಅಧ್ಯಯನ ಹಾಗೂ ಇತರ ವೇರಿಯೆಂಟ್ ಗಳನ್ನು ಪತ್ತೆ ಹಚ್ಚಲು ಇದರಿಂದ ಅನುಕೂಲವಾಗಲಿದೆ.

ರಾಜ್ಯದಲ್ಲಿ ಇಂದಿನ ವರೆಗೆ ಸುಮಾರು 4 ಕೋಟಿ ಲಸಿಕೆ ಹಾಕಲಾಗಿದೆ. 14.89 ಲಕ್ಷ ಡೋಸ್ ಲಸಿಕೆ ಲಭ್ಯವಿದೆ. ಮುಂದಿನ ವಾರ ದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ರಾಜ್ಯಕ್ಕೆ ಹಂಚಿಕೆಯಾಗುವ ಲಸಿಕೆ ಡೋಸ್ ಗಳನ್ನು 65 ಲಕ್ಷದಿಂದ 1 ಕೋಟಿಗೆ ಹೆಚ್ಚಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ನಿರ್ವಹಣೆ ಕುರಿತಂತೆ ಮಕ್ಕಳ ಐಸಿಯು ಬೆಡ್ ಗಳನ್ನು ಮೀಸಲಿರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಸದ್ಯ 0.75 ಪಾಸಿಟಿವಿಟಿ ದರ ಇದೆ. ಶೆ. 2 ರಷ್ಟು ಪಾಸಿಟಿವಿಟಿ ದರ ಹಾಗೂ ಶೆ. 40 ರಷ್ಟು ಆಕ್ಸಿಜನೇಟೆಡ್ ಬೆಡ್ ಗೆ ಸೋಂಕಿತರಾದರೆ ದಾಖಲಾದರೆ, ಮುಂದಿನ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರ ನೀಡಲಾಯಿತು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English