ಬೆಂಗಳೂರು : ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ತಿಳಿಸಿದರು.
ಅವರು ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ ಒಳಗಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರ ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದ್ದು, ಇದರಿಂದ ಸಾಮಾನ್ಯ ಜನರು ಸಹ ವಿಮಾನ ಯಾನ ಕೈಗೊಳ್ಳುವುದು ಸಾಧ್ಯವಾಗಲಿದೆ. ಎರಡು ಹಂತಗಳಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ರನ್ ವೇ ನಿರ್ಮಾಣ ಕಾರ್ಯ ಹಾಗೂ ಟರ್ಮಿನಲ್ ನಿರ್ಮಾಣ ಕಾರ್ಯ ಜತೆಯಾಗಿಯೇ ನಡೆಯುತ್ತಿದೆ. ನಿಗದಿತ ಅವಧಿಯ ಒಳಗಾಗಿ ಮಾತ್ರವಲ್ಲದೆ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ಶಿವಮೊಗ್ಗದಲ್ಲಿ ಇಂದು ರೈಲ್ವೇ ಓವರ್ ಬ್ರಿಡ್ಜ್ ಮತ್ತು ಹೊಸ ಸೇತುವೆ ನಿರ್ಮಾಣದ ಸುಮಾರು 600 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನಿರ್ವಹಿಸಲಾಗಿದೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯುರೋ.
Click this button or press Ctrl+G to toggle between Kannada and English