ಮಂಗಳೂರು : ಇದೇ ಸೆ. 27 ರಿಂದ 29ರ ವರೆಗೆ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನಲೆಯಲ್ಲಿ ಆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಸೆ. 27 ರಿಂದ 29ರ ವರೆಗೆ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು ಅಥವಾ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.
ಅದೇ ರೀತಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದ್ದು, ಈ ಆದೇಶವು ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗಳು ನಡೆಯುವ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Click this button or press Ctrl+G to toggle between Kannada and English