ಮಂಗಳೂರು : ಕೊವಿಡ್-19 ಸೋಂಕಿನ ಲಸಿಕೆ ಪಡೆಯದ ಫಲಾನುಭವಿಗಳನ್ನು ಕೂಡಲೇ ಗುರುತಿಸಿ ವ್ಯಾಕ್ಸಿನ್ ನೀಡಲು ಸಾಧ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಬಗ್ಗೆ ವ್ಯಾಪಕ ಜನ ಜಾಗೃತಿ ಮೂಡಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪೊನ್ನು ರಾಜ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಅ.25ರ ಸೋಮವಾರ ಕೋವಿಡ್-19 ಲಸಿಕಾಕರಣಕ್ಕೆ ಸಂಬಂಧಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಮನೆ-ಮನೆಗೆ ಸಮೀಕ್ಷೆ ಕೈಗೊಂಡು ಆ ಕುಟುಂಬದ ಸದಸ್ಯರಲ್ಲಿ ಕೋವಿಡ್ ಲಸಿಕೆ ಪಡೆಯದ ಫಲಾನುಭವಿಗಳ ಮಾಹಿತಿ ಸಂಗ್ರಹಿಸಬೇಕು. ಮುಖ್ಯವಾಗಿ ಲಸಿಕೆ ಪಡೆಯುವಂತೆ ಅವರಲ್ಲಿ ಜಾಗೃತಿ ಮೂಡಿಸಬೇಕು, ಇದನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು, ಮನೆ-ಮನೆ ಸಮೀಕ್ಷೆ ಸಂಬಂದ ಆರೋಗ್ಯ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಿಕೊಂಡು ಲಸಿಕೆ ಪಡೆಯದವರ ಪತ್ತೆಗೆ ಕ್ರಮ ವಹಿಸುವಂತೆ ತಿಳಿಸಿದರು.
ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಮಾತನಾಡಿ, ಆರೋಗ್ಯ ಇಲಾಖೆ ಅಧಿಕಾರಿಗಳು, ಮೇಲ್ವಿಚಾರಕರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮನೆ-ಮನೆ ಸಮೀಕ್ಷೆ ನಡೆಸಿ ಲಸಿಕೆ ಪಡೆಯದವರ ಪಡೆಯದವರ ಮಾಹಿತಿ ಸಂಗ್ರಹಿಸಿಬೇಕು, ಇದನ್ನು ಗಂಭೀರವಾಗಿ ಪರಿಗಣಿಸುವಂತೆ ತಾಕೀತು ಮಾಡಿದರು.
ಮಂಗಳೂರು ನಗರದಲ್ಲಿರುವ ಅಪಾರ್ಟ್‍ಮೆಂಟ್‍ಗಳ ಸಂಘದ ಸಂಯುಕ್ತಾಶ್ರಯದಲ್ಲಿ ಪ್ರತೀ ಮನೆ-ಮನೆಗಳಲ್ಲಿ ಲಸಿಕೆ ಪಡೆಯದ ಫಲಾನುಭವಿಗಳನ್ನು ಗುರುತಿಸಬೇಕು. ಅವರ ಪಟ್ಟಿ ಸಿದ್ದಪಡಿಸಬೇಕು. ಹೆಲ್ಪ್ ಲೈನ್ ಮೂಲಕವೂ ಲಸಿಕೆ ಪಡೆಯದ ಫಲಾನುಭವಿಗಳ ಮಾಹಿತಿ ಪಡೆದು, ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕರ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಕಿಶೋರ್ ಕುಮಾರ್, ಜಿಲ್ಲೆಯ ಎಲ್ಲಾ ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಸಿಡಿಪಿಓಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.
Click this button or press Ctrl+G to toggle between Kannada and English