ಬೆಂಗಳೂರು: ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದಾರೆ.
ಇಂದು ನಸುಕಿನ ಜಾವ ಎಂದಿನಂತೆ ಜಿಮ್ ನಲ್ಲಿ ದೇಹ ಕಸರತ್ತು ನಡೆಸುತ್ತಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತರಲಾಯಿತು. ಆಗ ಆಸ್ಪತ್ರೆಯಲ್ಲಿ ತೀವ್ರ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದ ಅವರನ್ನು ವಿಕ್ರಂ ಆಸ್ಪತ್ರೆಗೆ ವರ್ಗಾಯಿಸಲಾಯಿತು.
ಪುನೀತ್ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೆ ಅಸುನೀಗಿದ್ದಾರೆ. ಪುನೀತ್ ಅವರ ನಿಧನ ಸುದ್ದಿ ಕೇಳುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಚಿತ್ರರಂಗದ ಗಣ್ಯರು, ಅಸಂಖ್ಯಾತ ಅಭಿಮಾನಿಗಳು ಆಸ್ಪತ್ರೆಯತ್ತ ದೌಡಾಯಿಸಿದರು.
ಪುನೀತ್ ರಾಜ್ ಕುಮಾರ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ತಂಡೋಪತಂಡವಾಗಿ ಮನೆಯತ್ತ ಲಗ್ಗೆಯಿಡುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪುನೀತ್ ಮನೆಗೆ ತೆರಳುವ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅವರ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಏರ್ಪಡಿಸಲಾಗಿದೆ.
ಪುನೀತ್ ಅವರ ಮೃತದೇಹವನ್ನು ಕಂಠೀರವ ಕ್ರೀಡಾಂಗಣದಲ್ಲಿ ಇಡಲಾಗುತ್ತಿದ್ದು ಸಾರ್ವಜನಿಕರ ದರ್ಶನಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
Click this button or press Ctrl+G to toggle between Kannada and English