- Mega Media News Kannada - https://kannada.megamedianews.com -

ಚಂದ್ರಶೇಖರ ಪಾಟೀಲ ಅವರ ನಿಧನಕ್ಕೆ ಗಣ್ಯರ ಸಂತಾಪ

champa [1]ಮಂಗಳೂರು  :  ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಸೋಮವಾರ  ಬೆಳಿಗ್ಗೆ 6.30 ಕ್ಕೆ ನಿಧನರಾಗಿದ್ದಾರೆ.

ಕನ್ನಡದ ಹಿರಿಯ ಸಾಹಿತಿ, ಭಾಷಾತಜ್ಞ, ಭಾಷಾ ಹೋರಾಟಕಾರ ಚಂದ್ರಶೇಖರ ಪಾಟೀಲ (ಚಂಪಾ)ಅವರ ನಿಧನಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಪ್ರಧಾನ ಸಂಚಾಲಕ ಎಂ.ಜಿ.ಆರ್ ಅರಸ್, ದಕ್ಷಿಣ ಕನ್ನಡ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ್, ಉಡುಪಿ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕಾ.ವೀ.ಕೃಷ್ಣದಾಸ್, ಗೌರವಾಧ್ಯಕ್ಷೆ ತಾರಾ ಆಚಾರ್ಯ, ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ದಕ್ಷಿಣ ಕನ್ನಡ ಚುಸಾಪ ಜಿಲ್ಲಾ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ, ಮಾಜಿ ಜಿಲ್ಲಾಧ್ಯಕ್ಷ ಕವಿ ಪತ್ರಕರ್ತ ಗಣೇಶ್ ಪ್ರಸಾದ್ ಪಾಂಡೇಲು, ಗೋವಿಂದದಾಸ ಕಾಲೇಜಿನ ಪ್ರಾಚಾರ್ಯ ಪ್ರೊಫೆಸರ್ ಪಿ. ಕೃಷ್ಣಮೂರ್ತಿ, ಕರ್ನಾಟಕ ಜಾನಪದ,ಯಕ್ಷಗಾನ ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ.ಭಾಸ್ಕರ್ ರೈ ಕುಕ್ಕುವಳ್ಳಿ, ಅರೆಹೊಳೆ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್, ಕಲ್ಲಚ್ಚು ಪ್ರಕಾಶನದ ಮಹೇಶ್ ಆರ್ ನಾಯಕ್, ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಮಾಲತಿ ಶೆಟ್ಟಿ ಮಾಣೂರು, ಸಂಘಟಕ ಗುರುಪ್ರಸಾದ್ ಕಡಂಬಾರ್, ಟೈಮ್ಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಗಣೇಶ್ ಹೆಬ್ಬಾರ್ ಮೊದಲಾದ ಗಣ್ಯರು ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.

ಮೂಲತಃ ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂದ್ರಶೇಖರ ಪಾಟೀಲರು, ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ, ಸಾಹಿತ್ಯ ಲೋಕಕ್ಕೆ ಅವರು ಸಲ್ಲಿಸಿದ ಕೊಡುಗೆ ಅಪಾರ.

“ಚಂಪಾ” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಚಂದ್ರಶೇಖರ ಪಾಟೀಲ, ಒಬ್ಬ ಭಾರತೀಯ ಕವಿ, ನಾಟಕಕಾರರು. ಅವರನ್ನು ಬಂಡಾಯ ಚಳವಳಿಯ ಪ್ರಮುಖ ಧ್ವನಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದವರು ಚಂಪಾ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ  ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕರಾಗಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

1964ರಲ್ಲಿ ತಮ್ಮ ಇಬ್ಬರು ಗೆಳೆಯರಾದ ಸಿದ್ದಲಿಂಗ ಪಟ್ಟಣಶೆಟ್ಟಿ ಮತ್ತು ಗಿರಡ್ಡಿ ಗೋವಿಂದರಾಜ್ ಅವರೊಂದಿಗೆ ಆರಂಭವಾದ ‘ಸಂಕ್ರಮಣ’ ಎಂಬ ಪ್ರಭಾವಿ ಸಾಹಿತ್ಯ ಪತ್ರಿಕೆಯ ಸಂಪಾದಕರಾದ ಚಂಪಾ ಅವರು ಗೋಕಾಕ್ ಚಳವಳಿ, ಬಂಡಾಯ ಚಳವಳಿ, ತುರ್ತುಪರಿಸ್ಥಿತಿ ವಿರೋಧಿ ಆಂದೋಲನ, ಮಂಡಲ್ ವರದಿ ಅನುಷ್ಠಾನ, ರೈತ ಚಳವಳಿ ಅಂತಹ ಅನೇಕ ಸಾಮಾಜಿಕ ಮತ್ತು ಸಾಹಿತ್ಯಿಕ ಚಳವಳಿಗಳನ್ನು ಮುನ್ನಡೆಸಿದ್ದಾರೆ.

ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಿವೃತ್ತರಾದ ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಕನ್ನಡ ನಾಡು-ನುಡಿ, ಸಂಸ್ಕೃತಿ ಯ ರಕ್ಷಣೆಗಾಗಿ ಹೋರಾಡುತ್ತಾ ಬಂದಿರುವ ಚಂಪಾ. ಕಾವ್ಯಕೃಷಿಯಲ್ಲೇ ತೊಡಗಿಸಿಕೊಂಡಿದ್ದ ಚಂಪಾ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಪರಿಷತ್ತನ್ನೇ ಪ್ರಬಲ ಹೋರಾಟದ ವೇದಿಕೆಯನ್ನಾಗಿ ರೂಪಿಸಿದವರು. ಪುಸ್ತಕ ಮಾರಾಟದ ಮೂಲಕ ಸಣ್ಣ ಪ್ರಮಾಣದ ಪ್ರಕಾಶಕರನ್ನೂ ಉತ್ತೇಜಿಸಲು ‘ಪುಸ್ತಕ ಸಂತೆ’ ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಪರಿಷತ್ತಿಗೆ ತನ್ನದೇ ಆದ ವೆಬ್‌ಸೈಟ್‌, ಇ-ಮೇಲ್ ಸೌಲಭ್ಯಗಳು, ಗಣಕ ಸಮ್ಮೇಳನದ ಆಯೋಜನೆ ಮುಂತಾದ ಹಲವಾರು ಕಾರ್ಯಕ್ರಮಗಳನ್ನು ನಡೆಸಿದವರು ಚಂಪಾ.