ಮಂಗಳೂರು : ರಸ್ತೆ ಕಾಮಗಾರಿಗಾಗಿ ಶಿರಾಡಿಘಾಟ್ ವಾಹನ ಸಂಚಾರ ನಿಷೇಧ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿರುವ ಪ್ರಸ್ತಾವನೆ ಬಗ್ಗೆ ತಕ್ಷಣ ನಿರ್ಣಯ ಕೈಗೊಳ್ಳುವಂತಿಲ್ಲ. ದ.ಕ.ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಬೇಕೆಂದು ಸಂಸದ ನಳಿನ್‌ಕುಮಾರ್ ಕಟೀಲ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬಹುದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸಲು ಶಿರಾಡಿಘಾಟ್ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಆರು ತಿಂಗಳ ಕಾಲ ಮುಚ್ಚಿದರೆ ಕರಾವಳಿಯ ಜನಜೀವನ, ಆರ್ಥಿಕತೆ ಮತ್ತು ಕೈಗಾರಿಕೆ ಮೇಲೆ ತೀವ್ರ ಪರಿಣಾಮ ಬೀರಲಿದೆ. ಈ ಬಗ್ಗೆ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವರಿಕೆ ಮಾಡಿರುವುದಾಗಿ ಸಂಸದರು ತಿಳಿಸಿದ್ದಾರೆ.
ರಸ್ತೆಯ ಒಂದು ಬದಿಯನ್ನು ಮಾತ್ರ ಬಂದ್ ಮಾಡಿ ಇನ್ನೊಂದು ಬದಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬಹುದು. ತೀರಾ ಅನಿವಾರ್ಯವಾದರೆ ಕೆಲದಿನಗಳ ಕಾಲ ಮಾತ್ರ ಮಾರ್ಗ ಮುಚ್ಚುವ ಬಗ್ಗೆ ಪರಿಶೀಲನೆ ಮಾಡಬಹುದು. ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದೆಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English