ದ.ಕ. ಜಿಲ್ಲಾ ಸರಕಾರಿ ನೌಕರರ ಸಂಘದ ಚುನಾವಣೆ ಅಸಿಂಧು: ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದ ಮೇಲ್ಮನವಿ ನ್ಯಾಯಾಲಯ

7:07 PM, Saturday, November 18th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣಾ ಪ್ರಕ್ರಿಯೆಯು ನಿಯಮಾನಸಾರ ನಡೆದಿಲ್ಲ ಹಾಗೂ ಸಂಘದ ಬೈಲಾ ನಿಯಮಗಳಡಿ ಮತದಾರರ ಪಟ್ಟಿಯನ್ನು ತಯಾರಿಸಿಲ್ಲ ಎಂಬುದಾಗಿ ಮಾನ್ಯ ಮಂಗಳೂರಿನ ಸಿವಿಲ್ ನ್ಯಾಯಾಲಯವು ಘೋಷಿಸಿದ್ದು ಪದಾಧಿಕಾರಿಗಳ ಚುನಾವಣೆಯನ್ನು ನಿಯಮಾನುಸಾರ ನಡೆಸುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಪ್ರಕ್ರಿಯೆ ಮುಕ್ತ, ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆದಿಲ್ಲವೆಂದು ಬಂದರು ಇಲಾಖೆಯ ಅಧಿಕಾರಿ ಶ್ರೀ ಎಸ್.ನಿರಂಜನ ಮೂರ್ತಿ ಅವರು ಜಿಲ್ಲಾ ಸಂಘ ಹಾಗೂ ಚುನಾವಣಾ ಅಧಿಕಾರಿಗಳ ವಿರುದ್ಧ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.

ದಾವೆಯ ವಿಚಾರಣೆಯನ್ನು ನಡೆಸಿ ದಿನಾಂಕ 24.8.2022 ರಂದು ತೀರ್ಪು ನೀಡಿದ ಮಾನ್ಯ ಪ್ರಧಾನ ನ್ಯಾಯಾಲಯವು ನಿಯಮಾನುಸಾರ ಚುನಾವಣಾ ಪ್ರಕ್ರಿಯೆ ನಡೆದಿಲ್ಲ ಎಂದು ಘೋಷಿಸಿ ಮತ್ತೆ ಚುನಾವಣೆ ನಡೆಸುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮಂಗಳೂರಿನ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು.

ದಿನಾಂಕ 17.11.2023 ರಂದು ಮೇಲ್ಮನವಿ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ. ಚುನಾವಣಾ ಪ್ರಕ್ರಿಯೆ ಅಸಿಂಧು ಎಂದು ಘೋಷಿಸಿದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದು ಮರು ಚುನಾವಣೆ ನಡೆಸುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English