ಕನ್ನಡ ಚಿತ್ರರಂಗದ ಹಿರಿಯ ನಟಿ ಬೆಳ್ತಂಗಡಿ ಮೂಲದ ಲೀಲಾವತಿ ನಿಧನ

10:23 PM, Friday, December 8th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (85) ಅವರು ವಯೋಸಹಜ ಅನಾರೋಗ್ಯದಿಂದ ಇಂದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ಸಿದ್ದತೆ ಮಾಡಲಾಗುತ್ತಿದೆ.

1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಲೀಲಾವತಿ ಅವರು ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದು ಕನ್ನಡದ ಕಂದ ಚಿತ್ರಕ್ಕೆ ಫಿಲ್ಮ್ ಫೇರ್​ ಪ್ರಶಸ್ತಿ ಕೂಡ ಸಿಕ್ಕಿತ್ತು. ಜೀವಮಾನ ಸಾಧನೆಗಾಗಿ 1999ರಲ್ಲಿ ಲೀಲಾವತಿ ಅವರು ಡಾ. ರಾಜ್​ಕುಮಾರ್​ ಪ್ರಶಸ್ತಿ ಪಡೆದರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್​ ನೀಡಲಾಗಿತ್ತು.

1953ರಲ್ಲಿ ಬಿಡುಗಡೆಯಾಗಿದ್ದ ‘ಚಂಚಲ ಕುಮಾರಿ’ ಚಿತ್ರದ ಮೂಲಕ ಲೀಲಾವತಿ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ನಂತರ ಕನ್ನಡ, ತೆಲುಗು, ಮಲಯಾಳಂ, ತುಳು ಮುಂತಾದ ಭಾಷೆಗಳಲ್ಲಿ ನಟಿಸಿ ಲೀಲಾವತಿ ಸೈ ಎನಿಸಿಕೊಂಡರು. ‘ಮದುವೆ ಮಾಡಿನೋಡು’ ಮತ್ತು ‘ಸಂತ ತುಕಾರಾಮ್​’ ಸಿನಿಮಾಗಳಿಗೆ ಲೀಲಾವತಿ ಅವರು 2 ರಾಷ್ಟ್ರ ಪ್ರಶಸ್ತಿ ಪಡೆದಿದ್ದರು.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಗೆ ಮುಖ್ಯ ಮಂರ್ತಿ ಸಹಿತ ಚಿತ್ರರಂಗದ ಗಣ್ಯರು, ಅಭಿಮಾನಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English