ರಾಮ ಮಂದಿರ ಕರಸೇವಕನನ್ನು 31 ವರ್ಷಗಳ ಬಳಿಕ ಬಂಧಿಸಿದ ಪೊಲೀಸರು, ಬಿಜೆಪಿಯಿಂದ ಪ್ರತಿಭಟನೆ

9:41 PM, Wednesday, January 3rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ಹುಬ್ಬಳ್ಳಿಯಲ್ಲಿ ಮೂರು ದಶಕಗಳ ಹಿಂದೆ ರಾಮ ಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದ 75ರ ಹರೆಯದ ಕರಸೇವಕ ಶ್ರೀಕಾಂತ್ ಪೂಜಾರಿಯನ್ನು 31 ವರ್ಷಗಳ ಬಳಿಕ ಬಂಧಿಸಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಬುಧವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಮೂರು ದಶಕಗಳ ಹಿಂದಿನ ಪ್ರಕರಣವನ್ನು ಮರು ತನಿಖೆಗೆ ತೆಗೆದುಕೊಂಡಿರುವುದನ್ನು ಗಮನಿಸಿದಾಗ ಈ ವಿಚಾರ ಸ್ಪಷ್ಟವಾಗುತ್ತದೆ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಗೆ ಕೋಟ್ಯಂತರ ಮಂದಿ ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ ಕರಸೇವಕ ಶ್ರೀಕಾಂತ ಪೂಜಾರಿಯನ್ನು ಬಂಧಿಸಿರುವ ವಿಷಯ ಆಘಾತ ತಂದಿದೆ. ರಾಜ್ಯ ಸರಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇದರ ವಿರುದ್ಧ ಸಮಾಜ ಒಂದಾಗಬೇಕು ಎಂದರು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ, ಶ್ರೀರಾಮ ಮಂದಿರ ಉದ್ಘಾಟನೆಯೊಂದಿಗೆ ಶ್ರೀರಾಮ ದೇವರ ವಿಗ್ರಹ ಪ್ರತಿಷ್ಠಾಪನೆಯ ಕಾರ್ಯವನ್ನು ದೇಶವೇ ಎದುರು ನೋಡುತ್ತಿದೆ. ಇದರ ನಡುವೆ ಕಾಂಗ್ರೆಸ್ ತನ್ನ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ. ಬಂಧಿಸಿರುವ ಹಿರಿಯ ಕರಸೇವಕರ ಮೇಲಿನ ಕೇಸನ್ನು ಹಿಂಪಡೆದು ತಕ್ಷಣ ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದರು.

ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್ ಶೇಣವ, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ಕಸ್ತೂರಿ ಪಂಜ, ರಾಮದಾಸ ಬಂಟ್ವಾಳ, ಹರಿಕೃಷ್ಣ ಬಂಟ್ವಾಳ, ಕ್ಯಾಪ್ಟನ್ ಬೃಜೇಶ್ ಚೌಟ ಸೇರಿದಂತೆ ಹಲವು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English