ಉಜಿರೆ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ರಕ್ತಪಾತವಿಲ್ಲದೆ, ಸತ್ಯ ಮತ್ತು ಅಹಿಂಸೆಯ ಮೂಲಕ ದೇಶದ ಜನರನ್ನು ಒಗ್ಗೂಡಿಸಿ ಸ್ವಾತಂತ್ರ್ಯ ಪಡೆಯುವಲ್ಲಿ ಯಶಸ್ವಿಯಾದರು ಎಂದು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಯವರು ಹೇಳಿದರು.
ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ಭಾರತ ವಿಶ್ವದ ಶ್ರೇಷ್ಠ ರಾಷ್ಟ್ರವಾಗಿದ್ದು ನಾವು ಭಾರತೀಯರು ಎಂದು ಹೇಳಲು ಹೆಮ್ಮೆ ಪಡಬೇಕಾಗಿದೆ ಎಂದು ಹೇಳಿದರು.
ಅವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡಿ, ವಿದ್ಯಾರ್ಥಿಗಳಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿ ಶುಭ ಹಾರೈಸಿದರು.
ಯುವ ಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು ದೇಶಭಕ್ತಿಯೊಂದಿಗೆ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಬೇಕು. ದೇಶಕ್ಕೆ ಸ್ವಾತಂತ್ರ್ಯ ದೊರಕಿದ ಬಳಿಕ ಬಡತನ, ಅನಕ್ಷರತೆ, ಅನಾರೋಗ್ಯ ಮೊದಲಾದ ಸಮಸ್ಯೆಗಳು ನಿವಾರಣೆಯಾಗಿ ದೇಶ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ.
ಎಲ್ಲಾ ರೀತಿಯ ಅಸಮಾನತೆಗಳು ನಿವಾರಣೆಯಾಗಿ ಇಂದು ಎಲ್ಲರಿಗೂ ಶಿಕ್ಷಣ, ಉದ್ಯೋಗ, ಉದ್ಯಮಕ್ಕೆ ಸಮಾನ ಅವಕಾಶಗಳಿದ್ದು ಮಹಿಳಾ ಸಬಲೀಕರಣವಾಗಿದೆ. ಹೊಸ ಅವಕಾಶಗಳ ನಿರ್ಮಾಣವಾಗಿದೆ.
ಸ್ವಾತಂತ್ರ್ಯದ ಶತಮಾನೋತ್ಸವ ಆಚರಣೆ ಸಂದರ್ಭದಲ್ಲಿ ದೇಶವನ್ನು ಭವ್ಯ ಭಾರತವಾಗಿ ಹೇಗೆ ರೂಪುಗೊಳಿಸಬೇಕೆಂಬುದು ಯುವಜನತೆಯ ಹೊಣೆಗಾರಿಕೆಯಾಗಿದೆ. ವಿಶ್ವದ ಸರ್ವಶ್ರೇಷ್ಠ ದೇಶ ಭಾರತವಾಗಿದ್ದು ನಾವೆಲ್ಲರೂ ಭಾರತೀಯರು ಎಂದು ಹೇಳಲು ಹೆಮ್ಮೆ ಪಡುವಂತಾಗಬೇಕು. ಅದಕ್ಕಾಗಿ ೭೫ ಜನ ಹಿರಿಯ ನಾಗರಿಕರಿಂದ ೭೫ ಮಂದಿ ಬಾಲಕರು, ಬಾಲಕಿಯರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿ ಭವ್ಯ ಭಾರತ ರೂಪಿಸುವ ಹೊಣೆಗಾರಿಕೆಯನ್ನು ಅವರಿಗೆ ನೀಡಲಾಗಿದೆ ಎಂದು ಹೆಗ್ಗಡೆಯವರು ತಿಳಿಸಿದರು. ಮಾನವೀಯತೆಯೊಂದಿಗೆ ನಾವೆಲ್ಲರೂ ವಿಶ್ವಮಾನವರಾಗಬೇಕು ಎಂದು ಅವರು ಸಲಹೆ ನೀಡಿದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಎಸ್. ಸತೀಶ್ಚಂದ್ರ, ಸುಪ್ರಿಯಾ ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಪಿ. ಯನ್. ಉದಯಚಂದ್ರ, ಆಡಳಿತಾಧಿಕಾರಿ ಹರೀಶ್ ಎಂ. ವೈ. ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ ಕುಮಾರ್, ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ದಿನೇಶ್ ಚೌಟ, ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ. ಪಿ. ವಿಶ್ವನಾಥ್, ಎಲ್ಲಾ ಎಸ್.ಡಿ.ಎಂ. ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ಸುನಿಲ್ ಪಂಡಿತ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆದವು.
Click this button or press Ctrl+G to toggle between Kannada and English