ಮಂಗಳೂರು : ಭಾರತ್ ಮಾತಾಕಿ ಜೈ ಎಂದು ಯಾರೂ ಹೇಳಬಹುದು. ಅದಕ್ಕೆ ಯಾರೂ ಆಕ್ಷೇಪ ಮಾಡುವುದಿಲ್ಲ. ಆದರೆ ಅಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಬಗ್ಗೆ ಯಾರಿಗೂ ಗೊತ್ತಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರದ ಬೋಳಿಯಾರ್ ಗ್ರಾಮ ಸೌಹಾರ್ದಕ್ಕೆ ಮಾದರಿಯಾಗಿದ್ದು, ಬೋಳಿಯಾರ್ ನಲ್ಲಿ ಇತ್ತೀಚೆಗೆ ನಡೆದ ಘಟನೆಗೆ ಸಂಬಂಧಿಸಿ ಅಲ್ಲಿನ ಸ್ಥಳೀಯರು ಹಾಗೂ ಪೊಲೀಸರು ಪ್ರಕರಣವನ್ನು ಬಗೆಹರಿಸಲಿದ್ದಾರೆ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ ಎಂದು ಖಾದರ್ ಹೇಳಿದ್ದಾರೆ.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹೊರಗಿನವರು ಬೋಳಿಯಾರ್ ನಲ್ಲಿ ರಾಜಕೀಯ ಮಾಡಿ ಅಲ್ಲಿನ ವಾತಾವರಣವನ್ನು ಮತ್ತಷ್ಟು ಕೆಡಿಸುವ ಪ್ರಯತ್ನ ಬೇಡ ಎಂಬುದು ನನ್ನ ಮನವಿ ಎಂದರು.
ಬೋಳಿಯಾರು ವಿಚಾರದಲ್ಲಿ ರಾಜಕೀಯ ಮಾಡಿದರೆ ಯಾರಿಗೂ ಒಂದು ಮತವೂ ಹೆಚ್ಚಾಗದು. ವಿಧಾನಸಭಾ ಚುನಾವಣೆಯಲ್ಲಿ ಎರಡು ಪಕ್ಷದವರು ಸೇರಿ ನನ್ನನ್ನು ಸೋಲಿಸಲು ಪ್ರಯತ್ನಿಸಿದರೂ ಆಗಿಲ್ಲ. ಎಂದು ಖಾದರ್ ಹೇಳಿದರು.
ಇದನ್ನು ಪೊಲೀಸರು ಸಿಸಿಟಿವಿ ಕ್ಯಾಮರಾದ ಮೂಲಕ ತನಿಖೆ ನಡೆಸುತ್ತಿದ್ದಾರೆ. ಅಲ್ಲಿ ಕೆಲವೇ ಕೆಲವು ಯುವಕರಿಂದ ಕೆಟ್ಟ ಹೆಸರು ಬಂದಿದೆ. ಅದಕ್ಕಾಗಿ ಮೆರವಣಿಗೆ ಮುಗಿದ ಬಳಿಕ ಮೂವರು ಬೈಕಿನಲ್ಲಿ ಬಂದು ಘೋಷಣೆ ಕೂಗುವ ಉದ್ದೇಶವೇನು, ಇದು ತಪ್ಪು ಎಂದು ಹೇಳಿದ ಯು.ಟಿ.ಖಾದರ್, ಅದಕ್ಕೆ ಪ್ರತಿಯಾಗಿ ಅವರನ್ನು ಹಿಂಬಾಲಿಸಿಕೊಂಡು ಹಲ್ಲೆ ಮಾಡಿರುವ ಕೃತ್ಯವೂ ತಪ್ಪೇ. ಈ ಎರಡೂ ಘಟನೆಗಳ ಬಗ್ಗೆ ಪೊಲೀಸರು ಕಾನೂನು ಪ್ರಕಾರ ಕ್ರಮ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
Click this button or press Ctrl+G to toggle between Kannada and English