ದ್ವಿತೀಯ ಪಿ.ಯು.ಸಿ. ಪರೀಕ್ಷೆ-3 ನಿಷೇಧಾಜ್ಞೆ ಆದೇಶ

6:33 PM, Monday, June 24th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : 2024ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆ-3 ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜೂನ್ 24 ರಿಂದ ಜುಲೈ 5 ರವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ, ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ, ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ್ ಗೋಯಲ್ ಅವರು ಆದೇಶಿಸಿದ್ದಾರೆ.

ದ್ವಿತೀಯ ಪಿ.ಯು.ಸಿ. ಪರೀಕ್ಷೆ-3 ನಡೆಯಲಿರುವ ಬಲ್ಮಠ ಸರ್ಕಾರಿ ಪಿ.ಯು ಕಾಲೇಜು, ಮಂಗಳೂರಿನ ಮಿಲಾಗ್ರೀಸ್ ಕಾಲೇಜು ಹಾಗೂ ಕಾಟಿಪಳ್ಳ ಶ್ರೀ ನಾರಾಯಣಗುರು ಕಾಲೇಜು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ  ಪ್ರದೇಶವೆಂದು ಘೋಷಿಸಿದ್ದಾರೆ.

ಈ ಅವಧಿಯಲ್ಲಿ :
ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು, ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ. ಯಾವುದೇ ರೀತಿಯ ಕ್ಷಾರಕ (ಆಸಿಡ್) ಯಾ ಸ್ಫೋಟಕ ವಸ್ತುಗಳನ್ನು ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.

ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.. ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಐದು ಯಾ ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಯಾ ತಿರುಗಾಡುವುದನ್ನು ನಿಷೇಧಿಸಲಾಗಿದೆ.. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ.

ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂಟೂತ್ ಹಾಗೂ ಪೇಜರ್ ಇತ್ಯಾದಿ ಎಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English