ಉಡುಪಿ : ವಕ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗುತ್ತಾ ಉಡುಪಿಯಲ್ಲಿ ಬಿಜೆಪಿ ಕಾರ್ಯಕರ್ತರು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ನೇತೃತ್ವದಲ್ಲಿ ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.
ರಾಜ್ಯದಲ್ಲಿ ರೈತರ ಮತ್ತು ಮಠ ಮಂದಿರಗಳ ಆಸ್ತಿಗಳನ್ನು ಕಾಂಗ್ರೆಸ್ ವಕ್ಫ್ ಹೆಸರಲ್ಲಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಜಿಲ್ಲಾಧಿಕಾರಿ ಕಚೇರಿ ಗೇಟ್ ಮುಂದೆ ಪ್ರತಿಭಟನಾ ಸಭೆ ಆಯೋಜಿಸಿದ್ದರು. ಪ್ರತಿಭಟನಾ ಸಭೆಯ ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು.
ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟವಾಯಿತು. ಜಿಲ್ಲಾಧಿಕಾರಿ ಕಚೇರಿಯ ದ್ವಾರಕ್ಕೆ ಬಂದ ಡಿಸಿ ಡಾ.ವಿದ್ಯಾ ಕುಮಾರಿ ಅವರಿಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಮುಂದಿನ ದಿನಗಳಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಮತ್ತು ಶುಕ್ರವಾರ ಪಹಣಿ ಪರಿಶೀಲನೆ ಅಭಿಯಾನ ನಡೆಸಲಿದ್ದಾರೆ. ತಾಲೂಕು ಕಚೇರಿಗಳಿಗೆ ತೆರಳಿ ಬಿಜೆಪಿ ಕಾರ್ಯಕರ್ತರು ಪರಿಶೀಲನೆ ನಡೆಸಿದ್ದಾರೆ. ಈ ಮೂಲಕ ಕಂದಾಯ ಇಲಾಖೆ ಹಾಗೂ ಸರ್ಕಾರಕ್ಕೆ ಒತ್ತಡ ಹೇರಲು ತಂತ್ರಗಾರಿಕೆ ರೂಪಿಸಿದ್ದಾರೆ.
Click this button or press Ctrl+G to toggle between Kannada and English