ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ: ಮೇಯರ್

9:36 PM, Tuesday, December 3rd, 2024
Share
1 Star2 Stars3 Stars4 Stars5 Stars
(No Ratings Yet)
Loading...

ಮಂಗಳೂರು : ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದ್ದಾರೆ.

ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂಧೀನಗರ, ಶಿಶು ಕೇಂದ್ರೀಕೃತ ಶಾಲೆಗಳ ಸಂಯುಕ್ರ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರ, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ವಿಕಲಚೇತನರ ಸಬಲೀಕರಣಕ್ಕೆ ಹಲವಾರು ಸೌಲಭ್ಯಗಳನ್ನು ನೀಡುತ್ತಿವೆ. ಇವುಗಳಿಗೆ ಫಲಾನುಭವಿಗಳು ಅಲೆದಾಡುವಂತಾಗಬಾರದು. ಅರ್ಹರ ಮನೆ ಬಾಗಿಲಿಗೆ ತಲುಪಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಜಿ.ಪಂ. ಸಹಾಯಕ ಕಾರ್ಯದರ್ಶಿ ಸುಧೀರ್ ಗಾಂವ್ಕರ್ ಮಾತನಾಡಿದರು. ಉಪಮೇಯರ್ ಭಾನುಮತಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ನಗರ ಸಿಡಿಪಿಓ ಶ್ವೇತಾ, ಗ್ರಾಮಾಂತರ ಸಿಡಿಪಿಓ ಶೈಲಾ, ಗಣೇಶ್ ಶೆಟ್ಟಿ, ಮನೋಹರ್ ಉಳ್ಳಾಲ, ಅಶೋಕ್ ಪೈ ಮತ್ತಿತರರು ಇದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಶ್ಮಿ ಸ್ವಾಗತಿಸಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಹರೀಶ್ ವಂದಿಸಿದರು. ಡಾ.ವಸಂತ ಕುಮಾರ್ ಶೆಟ್ಟಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿವಿಧ ವಿಶೇಷ ಶಾಲೆಗಳ ವಿದ್ಯಾರ್ಥಿಗಳಾದ ಆಶೀರ್ವಾದ್ ಬಿ. ಶೆಟ್ಟಿ, ದೀಕ್ಷಿತಾ, ರೋಹಿತ್, ಯಶ್, ಭವ್ಯ ದೇವಾಡಿಗ, ಫಾತಿಮತುಲ್ ಅಫ್ರೀನಾ, ಕೀರ್ತಿಕಾ, ಪ್ರದೀಪ್, ಮುಸ್ತಫಾ, ಜ್ಯೋತಿ, ವರುಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಏರ್ಪಡಿಸಿದ ವಿಶೇಷ ಶಾಲಾ ಮಕ್ಕಳ ಕ್ರೀಡಾಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧಕರಾದ ಅಬ್ದುಲ್ ಹಮೀದ್ ತುಂಬೆ, ದುರ್ಗಾಲಕ್ಷ್ಮೀ ಕಾವೂರು, ವಿಶ್ವನಾಥ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು. ಹಿರಿಯ ನಾಗರೀಕರ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English