ಟೋಲ್ ಸುಂಕ ವಸೂಲಿಗೆ ಲಾರಿ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ : ವಿಡಿಯೋ ವೈರಲ್

7:36 PM, Sunday, January 19th, 2025
Share
1 Star2 Stars3 Stars4 Stars5 Stars
(No Ratings Yet)
Loading...

ಬಂಟ್ವಾಳ : ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲುನಲ್ಲಿ ಟೋಲ್ ಸುಂಕ ಪಾವತಿಸಿಲ್ಲ ಎಂಬ ಕಾರಣಕ್ಕಾಗಿ ಲಾರಿ ಚಾಲಕನ ಮೇಲೆ ಟೋಲ್ ಸಿಬ್ಬಂದಿ ಹಲ್ಲೆ ನಡೆಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಸ್ಥಳೀಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಚಾಲಕ ಬ್ರಹ್ಮರಕೂಟ್ಲು ಟೋಲ್ ಗೇಟ್ ನಲ್ಲಿ ಹಣ ನೀಡಿಲ್ಲ ಎಂಬ ಕಾರಣಕ್ಕಾಗಿ ಟೋಲ್ ಸಿಬ್ಬಂದಿ ಹಲ್ಲೆ ನಡೆಸಿದ್ದಲ್ಲದೆ, ಲಾರಿ ಬಾಗಿಲು ತೆರೆದು ಆತನ ಕೈ ಹಿಡಿದು ಹೊರಗೆ ಎಳೆಯುತ್ತಿರುವುದು, ಅಲ್ಲದೆ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ಬೈದು ಲಾರಿಯನ್ನು ವಾಪಸ್ ಹಿಂದೆ ಕಳುಹಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಟೋಲ್ ಗೇಟ್ ಸಿಬ್ಬಂದಿಯ ರೌದ್ರಾವತಾರದ ವಿಡಿಯೋವನ್ನು ಇತರ ವಾಹನ ಸವಾರರು ತೆಗೆದು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಟೋಲ್ ಸಿಬ್ಬಂದಿಯು ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಗೂಂಡಾಗಿರಿ ತೋರಿಸಿದ್ದಾರೆ ಇದು ಅಮಾನವೀಯ ಮತ್ತು ಅಕ್ಷಮ್ಯ ಅಪರಾಧ ಇದನ್ನು ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಅತ್ಯಂತ ಕಟು ಶಬ್ದಗಳಲ್ಲಿ ಖಂಡಿಸುತ್ತದೆ.

ಗೂಂಡಾಗಿರಿ ನಡೆಸಿದ ಟೋಲ್ ಸಿಬ್ಬಂದಿಯನ್ನು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದು, ತಪ್ಪಿದ್ದಲ್ಲಿ ಎಲ್ಲಾ ನಾಗರಿಕರನ್ನು ಸೇರಿಸಿಕೊಂಡು ಟೋಲ್ ಗೇಟ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದೇವೆ ಎಂದವರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English