ಬೆಂಗಳೂರು : ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಮಾನ್ಯ ಕರ್ನಾಟಕ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಖಡಕ್ ಆದೇಶ ನೀಡಿದೆ.
ಸೋಮವಾರ, ನ್ಯಾ. ಆರ್. ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಅಲ್ಲದೇ ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ,ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿದೆ.
ಮಾನ್ಯ ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೇ , ನ್ಯಾಯಾಂಗ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನಿಂದನೆಯನ್ನು ಹೈಕೋರ್ಟ್ ತೀವ್ರವಾಗಿ ಪರಿಗಣಿಸಿದ್ದು, ಮೇಲಿನ ಆದೇಶ ನೀಡಿದೆ.
ಅರ್ಜಿಯ ವಿಚಾರಣೆ ವೇಳೆ, ಮಹೇಶ್ ಶೆಟ್ಟಿ ತಿಮರೋಡಿ ಬೇಷರತ್ ಕ್ಷಮೆಯ ಅಫಿಡವಿಟ್ ಸಲ್ಲಿಸಿದ್ದರೂ, ತಮ್ಮ ವರ್ತನೆಯನ್ನು ಸರಿಪಡಿಸಿಕೊಂಡಿಲ್ಲ, ಮುಂದಿನ ದಿನಗಳಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹಚರರು ಯಾವುದೇ ಸಾಮಾಜಿಕ ಜಾಲತಾಣದಲ್ಲಿ, ಸಭೆ , ಸಮಾರಂಭಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳು, ನ್ಯಾಯಾಂಗ ನಿಂದನೆ, ಅಪಪ್ರಚಾರ, ಮಾನಹಾನಿ ಮಾಡಿದಲ್ಲಿ,ಕಾನೂನು ರೀತ್ಯಾ ತತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಪೋಲೀಸರಿಗೆ ಖಡಕ್ ಆದೇಶ ನೀಡಿದೆ. ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಹಾಗೂ ಆರ್. ರಾಜಶೇಖರ್ ಹಿಲಿಯಾರು ವಾದ ಮಂಡಿಸಿದರು.
Click this button or press Ctrl+G to toggle between Kannada and English