ಯು.ಟಿ ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

2:37 PM, Wednesday, May 24th, 2023
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು : ವಿಧಾನಸಭೆಯಲ್ಲಿ ಆರೋಗ್ಯಪೂರ್ಣ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೂಡಿದ ಚರ್ಚೆಗಳಾಗುವ ಮೇಲ್ಪಂಕ್ತಿಯನ್ನು ಎತ್ತಿಹಿಡಿದುವ ಜವಾಬ್ದಾರಿ ಸಭಾಧ್ಯಕ್ಷರ ಮೇಲಿದೆ. ಸದನದ ಘನತೆ, ಗಾಂಭೀರ್ಯ, ಗೌರವ, ಎತ್ತಿಹಿಡಿಯಬೇಕು. ಖಾದರ್ ಅವರ ಮುಂದಾಳ್ವತ್ವದಲ್ಲಿ ಸದನದ ಚರ್ಚೆ ಮೇಲ್ಮಟ್ಟಕ್ಕೇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಿಸಿದರು.

ಅವರು ಇಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಮಾತನಾಡಿದರು.

ಖಾದರ್ ಅವರು ಸಭಾದ್ಯಕ್ಷರ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವ ನಂಬಿಕೆ ವಿಶ್ವಾಸವಿದೆ. ಅವರು ಬಹಳ ತಾಳ್ಮೆ ಇರುವ ವ್ಯಕ್ತಿ. ಅದು ಈ ಹುದ್ದೆಗೆ ಅಗತ್ಯವಾದ ಗುಣ. ಸದಸನದಲ್ಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಚರ್ಚೆಗಳಾಗಲಿ ಎಂದರಲ್ಲದೇ ಹೊಸದಾಗಿ ಆರಿಸಿಬಂದ ಸದಸ್ಯರಿಗೆ ಅಭಿನಂದಿಸಿದರು. ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿಯೂ ತಿಳಿಸಿದರು.

ಉತ್ಸಾಹಿ, ಸಕ್ರಿಯ ರಾಜಕಾರಣಿ
ರಾಜಕಾರಣದ ಕುಟುಂಬದಿಂದ ಬಂದಿರುವ ಖಾದರ್ ಅವರು ತಮ್ಮ ತಂದೆಯ ನಿಧನದ ನಂತರ ಉಳ್ಳಾಲ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದವರು. ಅತ್ಯಂತ ಉತ್ಸಾಹಿ, ಸಕ್ರಿಯ ರಾಜಕಾರಣಿಯಾದ ಖಾದರದದ ಅವರು, ಶಾಸಕರು ಹಾಗೂ ಸಚಿವರಾಗಿ ಕಾರ್ಯನಿರ್ವಹಿಸಿದ್ದು, 2018 ರಲ್ಲಿ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಸದನವೀರ ಪ್ರಶಸ್ತಿಯೂ ದೊರೆತಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು. ಯು.ಟಿ.ಖಾದರ್ ಅವರು ಮಾದರಿ ಶಾಕಸರಾಗಿ ಕೆಲಸ ಮಾಡಿದ್ದು, ವಿರೋಧ ಪಕ್ಷದಲ್ಲಿದ್ದ ಸಂದರ್ಭದಲ್ಲಿ ಉಪವಿರೋಧಪಕ್ಷದ ನಾಯಕರಾಗಿ ಪರಿಣಾಮಕಾರಿಯಾಗಿ, ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದವರು. ಜಾತ್ಯಾತೀತ ಮನೋಭಾವ ಉಳ್ಳವರು ಎಂದರು.

ವಿಧಾನಸಭೆಯ ಗುಣಮಟ್ಟ ಉತ್ತಮವಾಗಲಿ
ಸಭಾಧ್ಯಕ್ಷರಾದವರು ಪಕ್ಷಾತೀತವಾಗಿ ಕೆಲಸ ಆಡಬೇಕೆಂಬ ನಿರೀಕ್ಷೆಯನ್ನು ಎಲ್ಲ ಸದಸ್ಯರೂ ಬಯಸುತ್ತಾರೆ. ವಿಧಾನಸಭೆ ಈ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ಇತ್ತೀಚಿನ ದಿನಗಳಲ್ಲಿ ವಿಧಾನಸಭೆಯ ಗುಣಮಟ್ಟ ಕಡಿಮೆಯಾಗುತ್ತಿದೆ ಎಂಬ ಭಾವನೆ ಅನೇಕರಲ್ಲಿದೆ. ಆ ಭಾವನೆ ಹೋಗಲಾಡಿಸುವ ಕೆಲಸವನ್ನು ಮಾಡಬೇಕಿದೆ. ವಿಧಾನಸಭೆ ಪ್ರಜಾಪ್ರಭುತ್ವದ ದೇಗುಲ. ಇಲ್ಲಿ ಏಳು ಕೊಟಿ ಕನ್ನಡಿಗರ ಸಮಸ್ಯೆಗಳನ್ನು ಚರ್ಚೆ ಮಾಡಬೇಕು.

ಈ ಎಲ್ಲಾ ವಿಚಾರಗಳನ್ನು ಸದನದಲ್ಲಿ ಚರ್ಚೆಯಾಗಬೇಕು. ಸದಸನದ ಅಧ್ಯಕ್ಷರ ಸ್ಥಾನಕ್ಕೆ ಪ್ರಜಾಪ್ರಭುತ್ವದಲ್ಲಿ ಮಹತ್ವದ ಸ್ಥಾನವಿದೆ. ಸದಸನದ ಚರ್ಚೆಯಲ್ಲಿ ಅನೇಕ ವಿಚಾರಗಳು ಬರುತ್ತವೆ. ಚರ್ಚೆಯಲ್ಲಿ ಭಾಗವಹಿಸುವಾಗ ಪದಬಳಕೆಯಲ್ಲಿ ಬಹಳ ಎಚ್ಛರಿಕೆ ವಹಿಸಬೇಕು. ಅಸಂವಿಧಾನಾತ್ಮಕ ಪದಬಳಕೆಗೆ ಅವಕಾಶವಿರಬಾರದು. ರಚನಾತ್ಮಾಕವಾದ ಸಲಹೆಗಳನ್ನು ನೀಡಲು ಅವಕಾಶ ಹಾಗೂ ಹಕ್ಕುಗಳಿವೆ ಎಂದರು.

ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕ
ವಿಧಾನಸಭೆಗೆ ಬಂದ ಮೇಲೆ ರಾಜ್ಯದ ಅಭಿವೃದ್ಧಿ, ಜನರ ರಕ್ಷಣೆ, ಕಾನೂನು ಸುವ್ಯವಸ್ಥೆ ಇರಬೇಕು. ಕಾನೂನು ಸುವ್ಯವಸ್ಥೆ ಇಲ್ಲದಿದ್ಧರೆ ಬಂಡವಾಳ ಹೂಡಿಕೆಯಾಗುವುದಿಲ್ಲ. ಬಂಡವಾಳ ಹೂಡಿಕೆಯಾಗದಿದ್ದರೆ, ಉದ್ಯೋಗ ಸೃಷ್ಟಿಯಾಗುವುದಿಲ್ಲ. ಉದ್ಯೋಗ ಸೃಷ್ಟಿಯಾಗದಿದ್ದರೆ ನಿರುದ್ಯೋಗದ ಸಮಸ್ಯೆ ಬಗೆಹರಿಸಲು ಆಗುವುದಿಲ್ಲ. ರಾಜ್ಯದ ಅಭಿವೃದ್ಧಿ, ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಆದ್ದರಿಂದ ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಬೆಳವಣಿಗೆ ಒಂದಕ್ಕೊಂದು ಪೂರಕವಾಗಿದೆ ಎಂದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English