ಮಂಗಳೂರು : ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನ ನಿಷೇಧಿಸಲಾಗಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English