ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಕಾಲೇಜು ಪರಿಸರದ ಧೂಳಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ, ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಉನ್ನತ ಶಿಕ್ಷಣ ಇಲಾಖೆಯು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಾಲೇಜಿನ ಸಮೀಪ ನಡೆಯುತ್ತಿರುವ ಡಯಾಲಿಸಿಸ್ ಕೇಂದ್ರದ ಕಾಮಗಾರಿಯಿಂದ ಏಳುತ್ತಿರುವ ಧೂಳಿನಿಂದ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದ್ದು, ಈ ಬಗ್ಗೆ ಶಾಸಕರಿಗೆ ಮನವಿ ಮಾಡಿದ್ದರೂ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.
ಆದರೆ, ಫೆಬ್ರವರಿ 16ರಂದು ಯಾವುದೇ ಪೂರ್ವಾನುಮತಿಯಿಲ್ಲದೆ ಸಾರ್ವಜನಿಕ ಸ್ಥಳದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲಾಗಿದೆ ಮತ್ತು ಈ ಪ್ರತಿಭಟನೆಗೆ ಪ್ರಾಂಶುಪಾಲರೇ ಪ್ರೇರೇಪಣೆ ನೀಡಿದ್ದಾರೆ ಎಂದು ಪೊಲೀಸ್ ಇಲಾಖೆ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಾಸಕ ಅಶೋಕ್ ಕುಮಾರ್ ರೈ ಸರ್ಕಾರಕ್ಕೆ ದೂರು ನೀಡಿದ್ದರು. ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ ಸರ್ಕಾರದ ವಿರುದ್ಧ ಎತ್ತಿಕಟ್ಟುವ ಮೂಲಕ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಜವಾಬ್ದಾರಿ ನಿರ್ವಹಿಸಲು ವಿಫಲರಾಗಿದ್ದಾರೆ ಎಂಬ ಆರೋಪದಡಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರ ಪ್ರಸ್ತಾವನೆಯ ಮೇರೆಗೆ ಈ ಅಮಾನತು ಕ್ರಮ ಕೈಗೊಳ್ಳಲಾಗಿದೆ.
ಈ ಮಧ್ಯೆ, ಪ್ರಾಂಶುಪಾಲರ ಅಮಾನತಿನ ಹಿಂದೆ ರಾಜಕೀಯ ಕಾರಣಗಳಿವೆ ಎಂಬ ಚರ್ಚೆಗಳು ಆರಂಭವಾಗಿವೆ. ವಿದ್ಯಾರ್ಥಿನಿಯರು ಪ್ರತಿಭಟನೆಯ ವೇಳೆ ಶಾಸಕರ ವಿರುದ್ಧ ಘೋಷಣೆ ಕೂಗಿದ ವೀಡಿಯೋ ವೈರಲ್ ಆಗಿದ್ದರಿಂದ ಮುಜುಗರಕ್ಕೊಳಗಾದ ಶಾಸಕರು, ದ್ವೇಷದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಶಿಕ್ಷಕ ವೃಂದದವರು ಖಂಡಿಸಿದ್ದಾರೆ. ಸಮಸ್ಯೆಯನ್ನು ಮೊದಲೇ ಶಾಸಕರ ಗಮನಕ್ಕೆ ತಂದಿದ್ದರೂ ಕ್ರಮ ಕೈಗೊಳ್ಳದೆ, ಈಗ ಪ್ರತಿಭಟನೆಯನ್ನೇ ನೆಪವಾಗಿಸಿ ಪ್ರಾಂಶುಪಾಲರನ್ನು ಶಿಕ್ಷಿಸುತ್ತಿರುವುದು ಸರಿಯಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









