ಮೂಡುಬಿದಿರೆ : ಕಾರ್ಕಳ ಮತ್ತು ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಮಿನಿ ಗೂಡ್ಸ್ ಟೆಂಪೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಈ ಘಟನೆಯಲ್ಲಿ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬಂಟ್ವಾಳ ತಾಲೂಕಿನ ಕೆಲಿಂಜೆ ನಿವಾಸಿ ಲೆಸ್ಟರ್ ಡೇವಿಡ್ ಡಿ’ಸೋಜ (30) ಎಂದು ಗುರುತಿಸಲಾಗಿದೆ.
ಮೂಡುಬಿದಿರೆಯಿಂದ ಕಾರ್ಕಳದ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್, ವಿರುದ್ಧ ದಿಕ್ಕಿನಿಂದ ಅಂದರೆ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಮಿನಿ ಗೂಡ್ಸ್ ಟೆಂಪೋಗೆ ಬಲವಾಗಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಟೆಂಪೋ ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬಸ್ ಚಾಲಕನ ಅಜಾಗರೂಕತೆ ಅಥವಾ ವಿರುದ್ಧ ದಿಕ್ಕಿನಲ್ಲಿ ಬಂದದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.
ಪ್ರಸ್ತುತ ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಡೈವರ್ಷನ್ ವಿಚಾರದಲ್ಲಿ ಸಂಬಂಧಪಟ್ಟವರು ತೀವ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯರು ಗಂಭೀರವಾಗಿ ಆರೋಪಿಸಿದ್ದಾರೆ. ಸೂಕ್ತವಾದ ಸೂಚನಾ ಫಲಕಗಳು ಅಥವಾ ವೈಜ್ಞಾನಿಕವಾದ ರಸ್ತೆ ಬದಲಾವಣೆ ವ್ಯವಸ್ಥೆ ಇಲ್ಲದಿರುವುದರಿಂದ ಈ ಪ್ರದೇಶದಲ್ಲಿ ಅಪಘಾತಗಳ ಸರಣಿ ಮುಂದುವರಿಯುತ್ತಿದ್ದು, ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









