ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಮತ್ತು ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂದು ಆರೋಪಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಹಾಗೂ ಉತ್ತರ ಮಂಡಲದ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪಾಲಿಕೆಯ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಕಳೆದ ಒಂದು ವರ್ಷದಿಂದ ಪಾಲಿಕೆಯು ಆಡಳಿತಾಧಿಕಾರಿಗಳ ವಶದಲ್ಲಿದ್ದು, ಜನಸಾಮಾನ್ಯರ ಅಹವಾಲುಗಳಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂಬುದು ಪ್ರತಿಭಟನಾಕಾರರ ಪ್ರಮುಖ ದೂರಾಗಿತ್ತು.
ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಿದೆ ಮತ್ತು ಇ-ಖಾತಾ ವಿತರಣೆಯಲ್ಲಿನ ಗೊಂದಲಗಳಿಂದ ಸಾರ್ವಜನಿಕರು ತತ್ತರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅವೈಜ್ಞಾನಿಕವಾಗಿ ಜಾರಿಗೊಳಿಸಲಾದ ತೆರಿಗೆ ಪದ್ಧತಿಯು ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಟೀಕಿಸಿದ ಅವರು, ಪಾಲಿಕೆಯ ಚುನಾವಣೆಯನ್ನು ನಡೆಸಲು ಸರ್ಕಾರ ವಿಳಂಬ ಮಾಡುತ್ತಿರುವುದು ಸೋಲಿನ ಭೀತಿಯಿಂದಾಗಿ ಎಂದು ಆರೋಪಿಸಿದರು. ತಕ್ಷಣವೇ ಚುನಾವಣೆ ನಡೆಸಿ ಜನಪ್ರತಿನಿಧಿಗಳ ಆಡಳಿತಕ್ಕೆ ಅವಕಾಶ ನೀಡಬೇಕೆಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಮಾಜಿ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಹಾಗೂ ರಾಜೇಶ್ ಕೊಟ್ಟಾರಿ ಸೇರಿದಂತೆ ಹಲವು ಹಿರಿಯ ನಾಯಕರು ಮಾತನಾಡಿದರು. ಪಾಲಿಕೆಯ ಅವ್ಯವಸ್ಥೆಯಿಂದಾಗಿ ಜನರು ಬೀದಿಗಿಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಎಚ್ಚರಿಸಿದ ನಾಯಕರು, ಕೂಡಲೇ ಸುಧಾರಣಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ತಿಳಿಸಿದರು. ಪ್ರತಿಭಟನೆಯಲ್ಲಿ ನಿತಿನ್ ಕುಮಾರ್, ದಿವಾಕರ ಪಾಂಡೇಶ್ವರ ಸೇರಿದಂತೆ ಬಿಜೆಪಿಯ ನೂರಾರು ಪ್ರಮುಖ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









