ಮಂಗಳೂರು : ಪ್ರಾದೇಶಿಕ ಉಪ ಔಷಧ ನಿಯಂತ್ರಕರಾದ ಬಿ.ಎನ್. ಬಾಬು ಅವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ದೂರಿನ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಏಕಕಾಲದಲ್ಲಿ ಮಂಗಳೂರು, ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಆರು ಅಧಿಕಾರಿಗಳ ತಂಡವು ಈ ದಾಳಿಯನ್ನು ಯಶಸ್ವಿಯಾಗಿ ಸಂಘಟಿಸಿದೆ.
ಈ ಕಾರ್ಯಾಚರಣೆಯ ವೇಳೆ ಅಧಿಕಾರಿಗೆ ಸೇರಿದ ಅಪಾರ ಪ್ರಮಾಣದ ಸ್ಥಿರ ಮತ್ತು ಚರಾಸ್ತಿಗಳು ಪತ್ತೆಯಾಗಿವೆ. ಪ್ರಾಥಮಿಕ ಅಂದಾಜಿನ ಪ್ರಕಾರ ಸುಮಾರು ರೂ. 3,37,04,000 ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಲಾಗಿದೆ. ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿರುವ ವಾಸದ ಮನೆಗಳು ಹಾಗೂ ವಾಣಿಜ್ಯ ಮಳಿಗೆಗಳು ಸೇರಿವೆ. ಅಲ್ಲದೆ, ಮಂಗಳೂರಿನಲ್ಲಿ ಅವರು ವಾಸವಿರುವ ಮನೆ ಮತ್ತು ಕೆಲಸ ಮಾಡುವ ಕಚೇರಿಯ ಮೇಲೆಯೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಅವರ ಮನೆಯಲ್ಲಿ ರೂ. 23,64,000 ನಗದು ಹಣ ಪತ್ತೆಯಾಗಿದ್ದು, ಇದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಭಾರಿ ಪ್ರಮಾಣದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಪತ್ತೆಯಾಗಿವೆ. ಬೆಂಗಳೂರು ನಗರದಲ್ಲಿರುವ ಅವರ ಫ್ಲಾಟ್ಗಳು ಮತ್ತು ವಾಸದ ಮನೆಗಳ ಮೇಲೆಯೂ ದಾಳಿ ಮುಂದುವರೆದಿದ್ದು, ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









