ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆರ್ಎಸ್ಎಸ್ ಮತ್ತು ಬಿಜೆಪಿಯನ್ನು ವಿಷಕಾರಿ ಹಾವುಗಳಿಗೆ ಹೋಲಿಸಿ ನೀಡಿರುವ ಹೇಳಿಕೆಯು ತೀವ್ರ ವಿವಾದಕ್ಕೆ ನಾಂದಿ ಹಾಡಿದೆ. ಈ ಕುರಿತು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಕಠಿಣ ಪದಗಳಲ್ಲಿ ಪ್ರತಿಕ್ರಿಯಿಸಿದ್ದು, ಖರ್ಗೆಯವರ ಮಾತುಗಳು ಸಮಾಜದಲ್ಲಿ ಅಶಾಂತಿ ಮತ್ತು ಪ್ರಚೋದನೆಯನ್ನು ಉಂಟುಮಾಡುವಂತಿವೆ ಎಂದು ಖಂಡಿಸಿದ್ದಾರೆ. ರಾಜಕೀಯ ಲಾಭಕ್ಕಾಗಿ ಇಂತಹ ಕೆಳಮಟ್ಟದ ಹೇಳಿಕೆಗಳನ್ನು ನೀಡುವುದು ಕಾಂಗ್ರೆಸ್ನ ಸಂಸ್ಕೃತಿಯನ್ನು ಬಿಂಬಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ‘ಹಾವು ಬಂದರೆ ನಮಾಜ್ ನಿಲ್ಲಿಸಿ ಅದನ್ನು ಕೊಲ್ಲಬೇಕು’ ಎಂಬ ಖರ್ಗೆಯವರ ಹೇಳಿಕೆಯನ್ನು ಉಲ್ಲೇಖಿಸಿದ ಶಾಸಕರು, ಇದು ಕೇವಲ ರಾಜಕೀಯ ವಿರೋಧವಲ್ಲ, ಬದಲಿಗೆ ಒಂದು ನಿರ್ದಿಷ್ಟ ಸಿದ್ಧಾಂತದ ಮೇಲೆ ನಡೆಸುತ್ತಿರುವ ವ್ಯವಸ್ಥಿತ ದಾಳಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆರ್ಎಸ್ಎಸ್ ಮತ್ತು ಹಿಂದೂ ವಿರೋಧಿ ಧೋರಣೆಯನ್ನು ಪದೇ ಪದೆ ಪ್ರದರ್ಶಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಸಮಾಜದಲ್ಲಿ ದ್ವೇಷದ ಬೀಜ ಬಿತ್ತುತ್ತಿದ್ದಾರೆ. ಇಂತಹ ಮನಸ್ಥಿತಿಯುಳ್ಳವರಿಗೆ ಅಧಿಕಾರ ನೀಡಿದರೆ ರಾಜ್ಯದಲ್ಲಿ ದಂಗೆಗಳು ಮತ್ತು ಅಶಾಂತಿ ತಲೆದೂರುವುದರಲ್ಲಿ ಸಂದೇಹವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಮತ್ತು ಶಾಂತಿಯುತ ವಾತಾವರಣ ನಿರ್ಮಿಸಲು ಕಾಂಗ್ರೆಸ್ನ ಇಂತಹ ‘ನೀಚ ಮನಸ್ಥಿತಿ’ಯನ್ನು ಸೋಲಿಸುವುದು ಅನಿವಾರ್ಯವಾಗಿದೆ ಎಂದು ಭರತ್ ಶೆಟ್ಟಿ ಪ್ರತಿಪಾದಿಸಿದ್ದಾರೆ. ಅಭಿವೃದ್ಧಿಯ ವಿಷಯಗಳ ಬಗ್ಗೆ ಚರ್ಚಿಸುವ ಬದಲು, ಜನರಲ್ಲಿ ಭಯ ಮತ್ತು ದ್ವೇಷ ಮೂಡಿಸುವ ಮೂಲಕ ಅಧಿಕಾರ ಹಿಡಿಯಲು ಕಾಂಗ್ರೆಸ್ ಯತ್ನಿಸುತ್ತಿದೆ. ಸಾರ್ವಜನಿಕರು ಇಂತಹ ಪ್ರಚೋದನಕಾರಿ ಹೇಳಿಕೆಗಳ ಬಗ್ಗೆ ಜಾಗೃತರಾಗಿರಬೇಕು ಮತ್ತು ಶಾಂತಿ ಕದಡುವ ಶಕ್ತಿಗಳನ್ನು ಹೆಮ್ಮೆಟ್ಟಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









